ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಕ್ಷೇತ್ರವಾರು ಫಲಿತಾಂಶ ಪ್ರಕಟಿಸಲಾಗಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಮತ್ತೊಬ್ಬ ಕಿಂಗ್‌ಪಿನ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೂವರು ಆರೋಪಿಗಳನ್ನು ಕುಮಾರ ಮಂಗಳಂ ಬಿಷ್ಣೋಯಿ, ದೀಪೇಂದ್ರ ಕುಮಾರ್ ಹಾಗೂ ಶಶಿಕುಮಾರ್ ಪಾಸ್ವಾನ್ ಎಂದು ಗುರುತಿಸಲಾಗಿದೆ. ಇವರಲ್ಲಿ ಶಶಿಕುಮಾರ್ ಪಾಸ್ವಾನ್ ಬಿ.ಟೆಕ್ ಓದಿದ್ದು, ಪ್ರಕರಣದ ಪ್ರಮುಖ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾಗಿದ್ದಾನೆ. ಈತನು ಪಂಕಜ್ ಎಂಬ ಮತ್ತೊಬ್ಬ ಆರೋಪಿಯ ಜತೆಗೂಡಿ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆಯ ಟ್ರಂಕ್‌ಗಳನ್ನು ಕದ್ದಿದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸಿಬಿಐ ಅಧಿಕಾರಿಗಳು 21 ಆರೋಪಿಗಳನ್ನು ಬಂಧಿಸಿದ್ದಾರೆ.
ಅಕ್ರಮಕ್ಕೆ ಸಂಬಂಧಿಸಿದಂತೆ ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್‌ನ ನಾಲ್ಕು ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ (CBI) ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್ ಅಲಿಯಾಸ್ ಆದಿತ್ಯ ಮತ್ತು ರಾಜು ಸಿಂಗ್ ಅವರನ್ನು ಪಟನಾ ಮತ್ತು ಹಜಾರಿಬಾಗ್ (ಜಾರ್ಖಂಡ್)ನಿಂದ ಅರೆಸ್ಟ್ ಮಾಡಲಾಗಿತ್ತು. ಇದಕ್ಕೂ ಮೊದಲು ಪ್ರಕರಣ ರೂವಾರಿ ಎಂದೇ ಹೇಳಲಾಗುತ್ತಿರುವ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಂಧಿಸಿದ್ದಾರೆ.
ಏನಿದು ಪ್ರಕರಣ?
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್ ಪರೀಕ್ಷಾ ಫಲಿತಾಂಶ ಪ್ರಕಟ