ನವದೆಹಲಿ/ಪಟನಾ: ಲೋಕಸಭೆ ಚುನಾವಣೆಯಲ್ಲಿ ಶತಾಯ ಗತಾಯ ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಸುಮಾರು 28 ಪಕ್ಷಗಳು ಒಗ್ಗೂಡಿ ರಚಿಸಿದ ಮೈತ್ರಿಕೂಟದಲ್ಲಿ (India Bloc) ಈಗ ಭಿನ್ನಮತದ ಬಿರುಗಾಳಿ ಬೀಸಿದೆ. ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿಯು ಈಗಾಗಲೇ ಇಂಡಿಯಾ ಒಕ್ಕೂಟದ ಜತೆಗಿನ ಕೊಂಡಿ ಕಳಚಿಕೊಂಡಿದೆ. ಪಂಜಾಬ್‌ನಲ್ಲಿ ಏಕಾಂಗಿಯಾಗಿ ಸ್ಪಂದಿಸುವುದಾಗಿ ಆಮ್ ಆದ್ಮಿ ಪಕ್ಷವೂ ಘೋಷಿಸಿದೆ. ಇದರ ಬೆನ್ನಲ್ಲೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಮತ್ತೆ ಬಿಜೆಪಿ ಜತೆ ಕೈಜೋಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಇಂಡಿಯಾ ಮೈತ್ರಿಕೂಟದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ.
ಹೌದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಜತೆಗೆ ಸ್ಪರ್ಧಿಸಲು ನಿತೀಶ್ ಕುಮಾರ್ ಅವರು ಚಿಂತನೆ ನಡೆಸಿದ್ದಾರೆ. ಈಗ ಆರ್‌ಜೆಡಿ ಜತೆಗಿನ ಮೈತ್ರಿಯನ್ನೂ ಮುರಿದುಕೊಳ್ಳುವ ಅವರು, ವಿಧಾನಸಭೆಯನ್ನು ವಿಸರ್ಜನೆಗೊಳಿಸಿ, ಬಿಜೆಪಿ ಜತೆಗೂಡಿ ಮತ್ತೆ ವಿಧಾನಸಭೆ ಚುನಾವಣೆ ಎದುರಿಸಲಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ, ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವುದರಿಂದ ಆರ್‌ಜೆಡಿ ಜತೆಗಿನ ಮೈತ್ರಿ ಮುರಿದುಕೊಂಡು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತ್ತೆ ಬಿಜೆಪಿ ಜತೆ ಕೈಜೋಡಿಸಿ, ರಾಜ್ಯಪಾಲರಿಗೆ ಸರ್ಕಾರ ರಚನೆಯ ಪ್ರಸ್ತಾಪ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಲೋಕಸಭೆ ಮೈತ್ರಿ ಏಕೆ ಪ್ರಮುಖ?
ಬಿಹಾರದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಾಗಲೆಲ್ಲ ಜೆಡಿಯುಗೆ ಹೆಚ್ಚು ಅನುಕೂಲವಾಗಲಿದೆ. ಅದರಲ್ಲೂ, 2019ರ ಲೋಕಸಭೆ ಚುನಾವಣೆ ಫಲಿತಾಂಶವು ಬಿಜೆಪಿ, ಜೆಡಿಯು ಹಾಗೂ ಲೋಕ ಜನ ಶಕ್ತಿ (LJP) ಮೈತ್ರಿ ಪರವಾಗಿತ್ತು. ಹಾಗಾಗಿ, ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ ಜೆಡಿಯುಗೆ ಹೆಚ್ಚಿನ ಲಾಭವಾಗುತ್ತದೆ ಎಂಬುದು ನಿತೀಶ್ ಕುಮಾರ್ ಅವರ ಲೆಕ್ಕಾಚಾರವಾಗಿದೆ ಎಂದು ಮೂಲಗಳು ತಿಳಿಸಿವೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಒಟ್ಟು 40 ಕ್ಷೇತ್ರಗಳ ಪೈಕಿ ಎನ್‌ಡಿಎ ಒಕ್ಕೂಟದ ಜೆಡಿಯು 17, ಬಿಜೆಪಿ 16 ಹಾಗೂ ಎಲ್‌ಜೆಪಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಗೆದ್ದಿತ್ತು.
ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಸೀಟು ಹಂಚಿಕೆ ಇಲ್ಲ ಎಂದ ಟಿಎಂಸಿ
ಬಿಜೆಪಿಗೆ ಸೆಡ್ಡು ಹೊಡೆದು, ಆರ್‌ಜೆಡಿ ಜತೆ ಮೈತ್ರಿ ಮಾಡಿಕೊಂಡಿರುವ ನಿತೀಶ್ ಕುಮಾರ್ ಅವರಿಗೆ ಸುಗಮವಾಗಿ ಸರ್ಕಾರ ಮುನ್ನಡೆಸಲು ಕೂಡ ಆಗುತ್ತಿಲ್ಲ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಅವರು ಮತ್ತೆ ಬಿಜೆಪಿ ಜತೆ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕುರಿತು ನಿತೀಶ್ ಕುಮಾರ್ ಅವರು ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಿಹಾರದಲ್ಲಿ ರಾಹುಲ್ ಗಾಂಧಿ ನಡೆಸುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳದಿರಲು ನಿತೀಶ್ ಕುಮಾರ್ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ, ನರೇಂದ್ರ ಮೋದಿ ಅವರನ್ನು ಮಣಿಸಲು ಒಗ್ಗೂಡಿದ ಪ್ರತಿಪಕ್ಷಗಳ ಪರಿಸ್ಥಿತಿ ಈಗ ಯುದ್ಧಕ್ಕೂ ಮೊದಲೇ ಶಸ್ತ್ರತ್ಯಾಗ ಮಾಡಿದಂತಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ