ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ (Money Laundering Case) ಇ.ಡಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದೆ. ಇದರಿಂದಾಗಿ ಅರವಿಂದ್ ಕೇಜ್ರಿವಾಲ್ ಅವರಿಗೀಗ ಬಂಧನದ ಭೀತಿ ಎದುರಾಗಿದೆ.
“ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರವಿಂದ್ ಕೇಜ್ರಿವಾಲ್ ಅವರಿಗೆ 9 ಬಾರಿ ಸಮನ್ಸ್ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಮಂಧ್ಯಂತರ ರಕ್ಷಣೆ ನೀಡಲು ಆಗುವುದಿಲ್ಲ” ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ಅವರಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇದುವರೆಗೆ 9 ಬಾರಿ ನೋಟಿಸ್ ಜಾರಿಗೊಳಿಸಿದ್ದಾರೆ. ಆದರೂ, ಕೇಜ್ರಿವಾಲ್ ಅವರು ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ. ಈಗ ನ್ಯಾಯಾಲಯವು ಬಂಧನದಿಂದ ರಕ್ಷಣೆ ನೀಡದ ಕಾರಣ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದಾಗ್ಯೂ, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.
#WATCH | Delhi HC refuses to grant any interim protection from coercive action to Delhi CM Arvind Kejriwal and said at this stage "we are not inclined to grant an interim relief."
— ANI (@ANI) March 21, 2024
Additional Solicitor General (ASG) SV Raju says, "The petition is not maintainable that was our… pic.twitter.com/LCOqs2R25u
ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: ಜಾಮೀನಿನ ಬೆನ್ನಲ್ಲೇ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ; ಹೊಸ ಕೇಸ್ ಜತೆಗೆ ಇ.ಡಿ 9ನೇ ಸಮನ್ಸ್ ಜಾರಿ
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ