Site icon Vistara News

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

PM Narendra Modi phone call to workers, who rescued from collapsed tunnel

ನವದೆಹಲಿ: 17 ದಿನಗಳ ಕಾರ್ಯಾಚರಣೆ (Uttarkashi Tunnel Rescue) ಬಳಿಕ ಕುಸಿದ ಸುರಂಗದಲ್ಲಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಮಂಗಳವಾರ ಹೊರ ತರಲಾಯಿತು(Trapped Workers Rescued). ರಕ್ಷಣೆ ಮಾಡಲಾದ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಒಂದೇ ಕೋಣೆಯಲ್ಲಿದ್ದ ಎಲ್ಲ ಕಾರ್ಮಿಕರಿಗೆ ಪ್ರಧಾನಿ ದೂರವಾಣಿ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು (Rescue Teams) ಹೊಗಳಿದ್ದಾರೆ.

ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ನಾನು ಹೇಳುವುದು ಏನೆಂದರೆ, ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ.

ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿಸಲಾಗುವುದಿಲ್ಲ. ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರ ಆತ್ಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಮಾನವೀಯತೆ ಮತ್ತು ತಂಡದ ಕೆಲಸಗಳ ಅದ್ಭುತ ಉದಾಹರಣೆಯನ್ನು ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಸಿಬ್ಬಂದಿ, ಪೊಲೀಸರು, ನುರಿತ ರಕ್ಷಣಾ ಸಿಬ್ಬಂದಿ, ವಿದೇಶಿ ತಂಡಗಳು, ಅತ್ಯಾಧುನಿಕ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳನ್ನು ಬಳಸಿ ಸತತವಾಗಿ ಕಾರ್ಯಾಚರಣೆ ಕೈಗೊಂಡರೂ ಹಲವು ಅಡೆತಡೆಗಳು ಎದುರಾದವು. ಆದರೆ, ಇದೆಲ್ಲವನ್ನೂ ಮೀರಿ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದೆ. 41 ಹಾಸಿಗೆಗಳು ಇರುವ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಆಂಬುಲೆನ್ಸ್‌ ಮೂಲಕ ಎಲ್ಲ ಕಾರ್ಮಿಕರನ್ನು ಕರೆದೊಯ್ಯಲಾಗಿದೆ.

ಏನಿದು ಸುರಂಗ ಕುಸಿತ ಪ್ರಕರಣ?

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದರು. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭೂಕುಸಿತ, ಡ್ರಿಲ್ಲಿಂಗ್‌ ಯಂತ್ರಗಳು ಕೈಕೊಟ್ಟಿರುವುದು ಸೇರಿ ಹಲವು ಕಾರಣಗಳಿಂದಾಗಿ ಕಾರ್ಮಿಕರ ರಕ್ಷಣೆಯು ಕಷ್ಟವಾಗಿತ್ತು. ವಿದೇಶಿ ತಜ್ಞರನ್ನೂ ಜನರ ರಕ್ಷಣೆಗೆ ಕರೆಸಲಾಗಿತ್ತು. ಈಗ ಕೊನೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.

ಈ ಸುದ್ದಿಯನ್ನೂ ಓದಿ: ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Exit mobile version