ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ (Ram Mandir) ಚಾಲನೆ ನೀಡಲು ದಿನಾಂಕ ನಿಗದಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2024ರ ಜನವರಿ 22ರಂದು ರಾಮಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರ ಲೋಕಾರ್ಪಣೆಗೆ ಈಗಾಗಲೇ ಭರದ ಸಿದ್ಧತೆಗಳು ಆರಂಭವಾಗಿದೆ ಎಂದೂ ತಿಳಿದುಬಂದಿದೆ.
“ಜನವರಿ 21ರಿಂದ 24ರವರೆಗೆ ಒಳ್ಳೆಯ ಮುಹೂರ್ತಗಳಿವೆ. ಈ ದಿನಾಂಕದಲ್ಲೇ ರಾಮಮಂದಿರ ಲೊಕಾರ್ಪಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಜನವರಿ 21ರಿಂದ 24ರ ಅವಧಿಯಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿ ಬಳಿಕ ಜನವರಿ 14ರಿಂದ ಅಂತಿಮ ಸಿದ್ಧತೆ ಕೈಗೊಳ್ಳಲಾಗುತ್ತದೆ” ಎಂದು ರಾಮಮಂದಿರ ಟ್ರಸ್ಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.
ರಾಮಮಂದಿರ ನಿರ್ಮಾಣ ಕಾಮಗಾರಿ
ರಾಮಮಂದಿರ ಲೋಕಾರ್ಪಣೆಗೂ ಮೊದಲು ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ರಾಮಲಲ್ಲಾನನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ರಾಮಮಂದಿರದ ಲೋಕಾರ್ಪಣೆ ವೇಳೆ ನಾಲ್ಕು ದಿನ ವಿಶೇಷ ಪೂಜೆ ಮಾಡಲಾಗುತ್ತದೆ ಎಂದು ಟ್ರಸ್ಟ್ ಮೂಲಗಳು ತಿಳಿಸಿವೆ. ಈಗಾಗಲೇ ಗರ್ಭಗುಡಿ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, ಹೆಚ್ಚಿನ ಕಾರ್ಮಿಕರು ಮಂದಿರ ನಿರ್ಮಾಣ ಕಾರ್ಯದಲ್ಲಿ ಹಗಲು ರಾತ್ರಿ ಎನ್ನದೆ ತೊಡಗಿದ್ದಾರೆ.
ಇದನ್ನೂ ಓದಿ: Ram Mandir: ರಾಮಮಂದಿರ ಗರ್ಭಗುಡಿಯ ಬಾಗಿಲು ಸ್ಟೀಲ್ ಅಲ್ಲ ಬಂಗಾರದ್ದು; ನೆಲಮಹಡಿ ಬಹುತೇಕ ರೆಡಿ
ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಕರೆ ನೀಡಿದ್ದಾರೆ.
ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್ 9ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.