ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ (Excise Policy Case) ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಐದು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ವಿರುದ್ಧ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಐದು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ” ಎಂದು ಇ.ಡಿಯು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Rouse Avenue Court) ಮೊರೆಹೋಗಿದೆ. ನ್ಯಾಯಾಲಯವು ಇ.ಡಿ ಅರ್ಜಿಯನ್ನು ಫೆಬ್ರವರಿ 7ರಂದು ವಿಚಾರಣೆ ನಡೆಸಲಿದೆ.
ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎಂಬ ಆರೋಪದಲ್ಲಿ ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ ಹಲವರನ್ನು ಬಂಧಿಸಲಾಗಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ನವೆಂಬರ್ 2 ಹಾಗೂ ನವೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ಜಾರಿಗೊಳಿಸಿತ್ತು. ಎರಡು ಬಾರಿಯೂ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾದ ಕಾರಣ ಜನವರಿ 3ರಂದು ಹಾಜರಾಗುವಂತೆ ಮೂರನೇ ಸಮನ್ಸ್ ಜಾರಿಗೊಳಿಸಲಾಗಿತ್ತು. ಈಗ ಅವರು ಮೂರನೇ ಬಾರಿಯೂ ವಿಚಾರಣೆಗೆ ಗೈರಾಗಿದ್ದಾರೆ. ಜನವರಿ 19 ಹಾಗೂ ಫೆಬ್ರವರಿ 2ರಂದು ನೀಡಿದ ಸಮನ್ಸ್‌ಗಳಿಗೂ ಅರವಿಂದ್ ಕೇಜ್ರಿವಾಲ್ ಕ್ಯಾರೆ ಎಂದಿಲ್ಲ.
Enforcement Directorate has moved to Rouse Avenue Court and filed a complaint against Delhi CM Arvind Kejriwal for not complying with the summons issued by the agency in the Delhi liquor policy money laundering case. Court heard some submissions today and put up for February 7,… pic.twitter.com/6Hx3Rn4V12
— ANI (@ANI) February 3, 2024
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚ ನೀಡಲಾಗಿದೆ ಎನ್ನುವ ಆರೋಪವಿದೆ. ಇದನ್ನು ಎಎಪಿ ಪದೇಪದೆ ನಿರಾಕರಿಸುತ್ತಲೇ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಮೋದಿ-ಅದಾನಿ ನಂಟು ಆಪ್ ಪೋಸ್ಟ್! ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ನೋಟಿಸ್
ನೋಟಿಸ್ ನೀಡಿದ ದೆಹಲಿ ಪೊಲೀಸರು
ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಪ್ರಕರಣದಲ್ಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಹೇಳಿಕೆ ನೀಡಿದ್ದರು. ಹಾಗಾಗಿ, ಈ ಕುರಿತು ತನಿಖೆ ನಡೆಸಲು ಮೂರು ದಿನಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ದೆಹಲಿ ಪೊಲೀಸರು ದೆಹಲಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ್ದಾರೆ. ಲೋಕಸಭೆ ಚನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಳ್ಳದಂತೆ ತಡೆಯಲು ಬಿಜೆಪಿಯು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ನಾಯಕರು ಈಗಾಗಲೇ ಆರೋಪಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ