ನವದೆಹಲಿ: ಉತ್ತರ ಪ್ರದೇಶದ ಅಮೇಥಿ (Amethi) ಹಾಗೂ ರಾಯ್‌ಬರೇಲಿಯಲ್ಲಿ (Raebareli) ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi) ಹಾಗೂ ಪ್ರಿಯಾಂಕಾ ವಾದ್ರಾ (Priyanka Vadra) ಸ್ಪರ್ಧೆ ಕುರಿತ ವರದಿಗಳು ಕೇಳಿಬರುತ್ತಲೇ ಇವೆ. ಗಾಂಧಿ ಕುಟುಂಬದ ಅತ್ಯಾಪ್ತ ಕ್ಷೇತ್ರಗಳಲ್ಲಿ ಇಬ್ಬರೂ ಸ್ಪರ್ಧಿಸುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇವೆ. ಇಷ್ಟಾದರೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್ 26ರಂದು ಮತದಾನ ನಡೆದಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಇವರು ಈಗ ರಾಜ್ಯಸಭೆಗೆ ಆಯ್ಕೆಯಾದ ಕಾರಣ ರಾಯ್‌ಬರೇಲಿಯಲ್ಲಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.
ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್‌ಗಿಲ್ಲ ಟಿಕೆಟ್; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ