ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್ ಆಗಿದೆ.
ಹೌದು, ರಾಹುಲ್ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
Exam mein kitne vote aaye? 🤣😂🤣😂 pic.twitter.com/bZf017rblZ
— desi mojito 🇮🇳 (@desimojito) July 26, 2024
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್ ಮಾಡಿದ್ದಾರೆ.
ಏನಿದು ನೀಟ್ ಪ್ರಕರಣ?
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್ ಗಾಂಧಿ; Video ಇಲ್ಲಿದೆ