ಲಖನೌ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ (Rahul Gandhi) ಅವರು ಉತ್ತರ ಪ್ರದೇಶದ ಅಮೇಥಿ (Amethi) ಕ್ಷೇತ್ರದಲ್ಲೂ ಸ್ಪರ್ಧಿಸುವುದು ಖಚಿತವಾಗಿದೆ. ರಾಹುಲ್ ಗಾಂಧಿ ಅವರು ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸುವ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ಸ್ಪಷ್ಟಪಡಿಸಿದ್ದಾರೆ. ಸಮಾಜವಾದಿ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿರುವ ಕಾರಣ ಅಖಿಲೇಶ್ ಯಾದವ್ ಅವರ ಹೇಳಿಕೆಯು ಪ್ರಾಮುಖ್ಯತೆ ಪಡೆದಿದೆ.
“ನೀವು ಕನೌಜ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೀರಿ. ನಿಮ್ಮ ಗೆಳೆಯ ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುತ್ತಿದ್ದಾರೆ” ಎಂದು ಸುದ್ದಿಗಾರರು ಕೇಳಿದ್ದಕ್ಕೆ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದರು. “ಹೌದು, ಖಂಡಿತವಾಗಿಯೂ ಎಲ್ಲರೂ ಬರುತ್ತೇವೆ. ಉತ್ತರ ಪ್ರದೇಶದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡುತ್ತೇವೆ. ಚುನಾವಣಾ ಬಾಂಡ್ ಕೇಸ್ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬರುತ್ತಲೇ ಬಿಜೆಪಿಯವರ ಬಣ್ಣ ಬಯಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆ ಮೂಲಕ ಅಮೇಥಿಯಿಂದಲೂ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬುದರ ಸುಳಿವು ನೀಡಿದರು.
#WATCH | Kannauj: Replying to the question "that you have come to Kannauj, your friend (Rahul Gandhi) is going to come (contest) to Amethi", Samajwadi Party chief Akhilesh Yadav says, "Everyone will come now. The gathering will be in Uttar Pradesh only…" pic.twitter.com/glPZ1FyikT
— ANI (@ANI) April 25, 2024
ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಹುಲ್ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಈಗ ಮತ್ತೆ ರಾಹುಲ್ ಗಾಂಧಿ ಹಾಗೂ ಸ್ಮೃತಿ ಇರಾನಿ ಅವರ ಮಧ್ಯೆ ವಯನಾಡಿನಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ರಾಮಮಂದಿರಕ್ಕೆ ಭೇಟಿ?
ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!