ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಕೇಂದ್ರೀಯ ಚುನಾವಣೆ ಸಮಿತಿ ಸಭೆ ನಡೆಸಿದ್ದು, ರಾಹುಲ್ ಗಾಂಧಿ ಅವರು ವಯನಾಡಿನಿಂದ ಸ್ಪರ್ಧಿಸುವುದು ಸಭೆಯಲ್ಲಿ ಖಚಿತವಾಗಿದೆ ಎಂದು ತಿಳಿದುಬಂದಿದೆ.
ಈಶಾನ್ಯ ಭಾಗದ 7 ರಾಜ್ಯಗಳು, ಕರ್ನಾಟಕ, ಕೇರಳ, ತೆಲಂಗಾಣ, ಛತ್ತೀಸ್‌ಗಢ ಹಾಗೂ ದೆಹಲಿ ಅಭ್ಯರ್ಥಿಗಳ ಆಯ್ಕೆಯಾಗಿ ಕಾಂಗ್ರೆಸ್ ಕೇಂದ್ರೀಯ ಚುನಾವಣೆ ಸಮಿತಿ ಸಭೆ ನಡೆಯುತ್ತಿದೆ. ಇದಾದ ಬಳಿಕ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿ ಹಲವು ನಾಯಕರು ಸಭೆ ನಡೆಸುತ್ತಿದ್ದು, ಗುಜರಾತ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಳ್ಳುತ್ತಿರುವ ರಾಹುಲ್ ಗಾಂಧಿ ಅವರು ವರ್ಚ್ಯುವಲ್ ವೇದಿಕೆ ಮೂಲಕ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ, ಅವರು ವಯನಾಡು ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು.
#WATCH Telangana Chief Minister Revanth Reddy reached the party headquarters to attend the CEC (Central Election Committee) meeting of the Congress, in Delhi. pic.twitter.com/Doqeuv0dkY
— ANI (@ANI) March 7, 2024
ಅಮೇಥಿಯಿಂದಲೂ ರಾಹುಲ್ ಗಾಂಧಿ ಸ್ಪರ್ಧೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೇಥಿ ಲೋಕಸಭೆ ಕ್ಷೇತ್ರದಿಂದ ರಾಹುಲ್ ಗಾಂಧಿ ಹಾಗೂ ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಅಮೇಥಿ ಹಾಗೂ ವಯನಾಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಆದರೆ, ಅಮೇಥಿಯಲ್ಲಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲನುಭವಿಸಿದ್ದರು. ಆದರೂ, ಈ ಬಾರಿ ಮತ್ತೆ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಚುನಾವಣೆ ಮೊದಲೇ ಕಾಂಗ್ರೆಸ್‌ಗೆ ಶಾಕ್; ಬಿಜೆಪಿ ಸೇರಿದ ಮಾಜಿ ಸಿಎಂ ಕರುಣಾಕರನ್ ಪುತ್ರಿ
ರಾಯ್‌ಬರೇಲಿ ಸಂಸದೆಯಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧಿಸಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ, ಸೋನಿಯಾ ಗಾಂಧಿ ಅವರು 2004ರಿಂದಲೂ ಸ್ಪರ್ಧಿಸುತ್ತಿದ್ದ ರಾಯ್‌ಬರೇಲಿ ಲೋಕಸಭೆ ಕ್ಷೇತ್ರವು ತೆರವಾಗಿದೆ. ಇದೇ ಕ್ಷೇತ್ರದಲ್ಲಿ ಈಗ ಪ್ರಿಯಾಂಕಾ ವಾದ್ರಾ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆ ಕಣಕ್ಕೆ ಇಳಿಯಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಮಗಳಿಗೆ ರಾಯ್‌ಬರೇಲಿ ಕ್ಷೇತ್ರವನ್ನು ಬಿಟ್ಟುಕೊಡಲೆಂದೇ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ