ನವ ದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಎಐಸಿಸಿ ಅಧ್ಯಕ್ಷೆ (Congress President) ಸೋನಿಯಾ ಗಾಂಧಿ ಅವರಿಗೆ ಕ್ಷಮೆ ಕೋರಿದ್ದಾರೆ. ಕಳೆದ 50 ವರ್ಷಗಳಿಂದ ನಾನು ಕಾಂಗ್ರೆಸ್‌ಗೆ ಸೈನಿಕನ ರೀತಿಯಲ್ಲಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
ರಾಜಸ್ಥಾನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಅವರು ಸ್ಪರ್ಧಿಸಬೇಕೆಂದು ಹೈಕಮಾಂಡ್ ಹೇಳಿದ ಬೆನ್ನಲ್ಲೇ, ಗೆಹ್ಲೋಟ್ ನಿಷ್ಠ ಶಾಸಕರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಇದರಿಂದ ಹೈಕಮಾಂಡ್ ತೀವ್ರ ಮುಜುಗರಕ್ಕೆ ಒಳಗಾಗಿತ್ತು. ಈ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಅವರು ಗುರುವಾರ ದಿಲ್ಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಎಐಸಿಸಿ ಅಧ್ಯಕ್ಷ ಎಲೆಕ್ಷನ್‌ಗೆ ಸ್ಪರ್ಧಿಸಲು ತಿರುವನಂಥಪುರದ ಸಂಸದ ಶಶಿ ತರೂರ್ ಈಗಾಗಲೇ ನಾಮಪತ್ರ ಪಡೆದುಕೊಂಡಿದ್ದು, ಶುಕ್ರವಾರ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಅದೇ ರೀತಿ, ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರೂ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅವರು ಕಾಂಗ್ರೆಸ್ ಕಚೇರಿಯಲ್ಲಿ ತಮ್ಮ ನಾಮಪತ್ರ ಪಡೆದುಕೊಂಡಿದ್ದು, ನಾಳೆ ಸಲ್ಲಿಸಲಿದ್ದಾರೆ.
ಶಶಿ ತರೂರ್, ದಿಗ್ವಿಜಯ್ ಸಿಂಗ್ ಮಾತ್ರವಲ್ಲದೇ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿರುವ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಮುಕುಲ್ ವಾಸ್ನಿಕ್ ಅವರು ಸೇರಿದಂತೆ ಕೆಲವರು ಹೆಸರುಗಳು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬರುತ್ತಿವೆ. ವಾಸ್ತವದಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಅವರು ಗಾಂಧಿ ಕುಟುಂಬದ ಆಯ್ಕೆಯಾಗಿತ್ತು. ಆದರೆ, ಎಐಸಿಸಿ ಅಧ್ಯಕ್ಷ ಸ್ಥಾನದ ಜತೆಗೇ ರಾಜಸ್ಥಾನ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ರಾಹುಲ್ ಗಾಂಧಿ ಅವರು ಬಹಿರಂಗವಾಗಿಯೇ ವಿರೋಧಿಸಿದ್ದರು. ಬಳಿಕ ರಾಜಸ್ಥಾನದಲ್ಲಿ ಬಂಡಾಯದ ನಾಟಕ ನಡೆಯಿತು. ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಷೆ ಎಲೆಕ್ಷನ್ ನಡೆಯಲಿದೆ.
ಇದನ್ನೂ ಓದಿ| Congress President Election | ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಕ್ಟೋಬರ್ 17ಕ್ಕೆ; ಮತ ಎಣಿಕೆ 19ಕ್ಕೆ