Site icon Vistara News

Ram Mandir: ಇಂದು ಇಡೀ ದಿನ ಷೇರು ಮಾರುಕಟ್ಟೆ ಓಪನ್;‌ ಜ.22ರಂದು ರಜೆ ಘೋಷಣೆ

Stock Market

Ram Mandir: BSE, NSE to function today, holiday on January 22

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದ್ದು, ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ. ಇದಕ್ಕಾಗಿ ಅಯೋಧ್ಯೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಭಾರಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದೆ. ಇದರ ಬೆನ್ನಲ್ಲೇ, ಜನವರಿ 22ರಂದು ಷೇರು ಮಾರುಕಟ್ಟೆ ವಹಿವಾಟಿಗೂ ರಜೆ ಘೋಷಿಸಲಾಗಿದೆ. ಜನವರಿ 22ರಂದು ರಜೆ ಹಿನ್ನೆಲೆಯಲ್ಲಿ ಶನಿವಾರ (ಜನವರಿ 20) ಪೂರ್ತಿ ಷೇರು ಮಾರುಕಟ್ಟೆ ವಹಿವಾಟು ಇರಲಿದೆ.

ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ (BSE), ನ್ಯಾಷನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ (NSE) ವಹಿವಾಟು ಶನಿವಾರ ಪೂರ್ತಿ ಇರಲಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಷೇರು ಮಾರುಕಟ್ಟೆ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ಆರ್‌ಬಿಐ ಮೊದಲು ಘೋಷಿಸಿತ್ತು. ಆದರೆ, ಮೊದಲ ಸುತ್ತೋಲೆಯನ್ನು ಪರಿಷ್ಕರಿಸುವ ಆರ್‌ಬಿಐ, ಜನವರಿ 22ರಂದು ಬೆಳಗ್ಗೆ 9 ಗಂಟೆ ಬದಲಾಗಿ ಮಧ್ಯಾಹ್ನ 2.30ರಿಂದ ವಹಿವಾಟು ಆರಂಭವಾಗಲಿದೆ ಎಂದು ತಿಳಿಸಿದೆ.

ಕೇಂದ್ರ ನೌಕರರಿಗೆ ಅರ್ಧ ದಿನ ರಜೆ

ದೇಶದ ಜನತೆಯ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕಚೇರಿ ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. “ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠೆಯನ್ನು ಭಾರತದಾದ್ಯಂತ 22ನೇ ಜನವರಿ 2024ರಂದು ಆಚರಿಸಲಾಗುತ್ತದೆ. ಆಚರಣೆಯಲ್ಲಿ ಭಾಗವಹಿಸಲು ನೌಕರರನ್ನು ಸಕ್ರಿಯಗೊಳಿಸಲು, ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಮಧ್ಯಾಹ್ನ 12.40 ಗಂಟೆಯವರೆಗೆ ಅರ್ಧ ದಿನ ಮುಚ್ಚಲು ನಿರ್ಧರಿಸಲಾಗಿದೆ” ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯಲ್ಲಿ ತಯಾರಾಗುತ್ತಿದೆ ಭಕ್ತರಿಗೆ ಹಂಚಲು 13.5 ಲಕ್ಷ ದೇಸಿ ತುಪ್ಪದ ಲಾಡು

ಅಯೋಧ್ಯೆಯಲ್ಲಿ ಹೈ ಸೆಕ್ಯುರಿಟಿ

ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಆವರಣಕ್ಕೆ ಪದೇಪದೆ ಬರುವವರು, ಹಾಗೆ ಬರುವವರ ಚಲನವಲನ, ಯಾವುದೇ ಶಂಕಾಸ್ಪದ ವರ್ತನೆ ಕಂಡುಬಂದರೆ ಕೂಡಲೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಸ್ವಯಂಚಾಲಿತವಾಗಿ ಅಲರ್ಟ್‌ ನೀಡುತ್ತದೆ. ಅದರಂತೆ ಭದ್ರತಾ ಸಿಬ್ಬಂದಿಯು ಕಾರ್ಯಪ್ರವೃತ್ತರಾಗುತ್ತಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version