ನವದೆಹಲಿ: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ (Ram Mandir)ದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (L.K. Advani) ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (Vishva Hindu Parishad) ತಿಳಿಸಿದೆ. ರಾಮ ಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಅಡ್ವಾಣಿ ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
2023ರ ಡಿಸೆಂಬರ್‌ನಲ್ಲಿ ವಿಎಚ್ಪಿ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಅಡ್ವಾಣಿ (96) ಮತ್ತು ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ (89) ಅವರಿಗೆ ಆಹ್ವಾನ ಪತ್ರಿಕೆ ಕಳುಹಿಸಿತ್ತು. ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಡ್ವಾಣಿ ಅವರಿಗೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಚರ್ಚೆಗೆ ಗ್ರಾಸವಾಗಿತ್ತು
ಈ ಹಿಂದೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದರು. 1990ರ ದಶಕದಲ್ಲಿ ರಾಮ ಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ರಾಮ ಮಂದಿರದ ಕಾರ್ಯಕ್ರಮದಿಂದ ದೂರವಿರಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.
ರಾಮಮಂದಿರ ಉದ್ಘಾಟನೆಗೆ ಹೋಗದಿರಲು ಸೋನಿಯಾ, ಖರ್ಗೆ ನಿರ್ಧಾರ
ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ತೀರ್ಮಾನಿಸಿದೆ. “ಇದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮವಾಗಿರುವ ಕಾರಣ ತೆರಳುವುದಿಲ್ಲ” ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಕುರಿತು ಪ್ರಕಟಣೆ ಹೊರಡಿಸಿದ್ದರು. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲಾಗಿದೆ. ಭಗವಾನ್ ಶ್ರೀರಾಮನನ್ನು ಕೋಟ್ಯಂತರ ಜನ ಆರಾಧಿಸುತ್ತಾರೆ. ಅಷ್ಟಕ್ಕೂ ಧರ್ಮವು ವೈಯಕ್ತಿಕ ವಿಚಾರವಾಗಿದೆ. ಅಷ್ಟಕ್ಕೂ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮವನ್ನಾಗಿ ರೂಪಿಸಲಾಗಿದೆ. ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಕಾರ್ಯಕ್ರಮವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ, ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನೆಗೆ ತೆರಳದಿರಲು ತೀರ್ಮಾನಿಸಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು. ಈ ಕ್ರಮವನ್ನು ಬಿಜೆಪಿ ಟೀಕಿಸಿದೆ.
ಭರದ ಸಿದ್ಧತೆ
ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಸುಮಾರು 7 ಸಾವಿರ ಮಂದಿ ಭಾಗವಹಿಸಲಿದ್ದು, ಈಗಾಗಲೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ. ‘ಪ್ರಾಣ ಪ್ರತಿಷ್ಠಾಪನೆ’ಯ ಪೂಜೆಯು ಜನವರಿ 16ರಿಂದ ಪ್ರಾರಂಭವಾಗಲಿದೆ.
ಇದನ್ನೂ ಓದಿ: Ram Mandir: ರಾಮ ಮಂದಿರ ಉದ್ಘಾಟನೆಗೆ ಆಡ್ವಾಣಿ, ಜೋಶಿಗೆ ವಿಹಿಂಪ ಆಹ್ವಾನ