Site icon Vistara News

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Reasi Terror Attack

Reasi Terror Attack

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ (Reasi Terror Attack). ಈ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಪೋಲೀಸರು ಶಂಕಿತ ಉಗ್ರನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ರಿಯಾಸಿ ಜಿಲ್ಲೆಯ ಪೂನಿ ಪ್ರದೇಶದಲ್ಲಿ ಇತ್ತೀಚೆಗೆ ಬಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ರೇಖಾ ಚಿತ್ರ ಬಿಡುಗಡೆ ಮಾಡಿದ್ದೇವೆ. ಈತನ ಸುಳಿವು ನೀಡಿದವರಿಗೆ ರಿಯಾಸಿ ಪೊಲೀಸರು 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದಲ್ಲಿ ಈ ರೇಖಾಚಿತ್ರವನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕನ ಬಗ್ಗೆ ಸುಳಿವು ಸಿಕ್ಕವರು ರಿಯಾಸಿ ಎಸ್ಎಸ್‌ಪಿ – 9205571332, ರಿಯಾಸಿ ಎಎಸ್‌ಪಿ- 9419113159, ರಿಯಾಸಿ ಡಿವೈಎಸ್‌ಪಿ ಪ್ರಧಾನ ಕಚೇರಿ – 9419133499, ಪೂನಿ ಎಸ್ಎಚ್ಒ- 7051003214, ರಾನ್ಸೂ ಎಸ್ಎಚ್ಒ – 7051003213, ರಿಯಾಸಿ ಪಿಸಿಆರ್ – 9622856295 ನಂಬರ್‌ಗೆ ಮಾಹಿತಿ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.

ರಿಯಾಸಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಭದ್ರತಾ ಸಿಬ್ಬಂದಿಯ 11 ತಂಡಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ರಾನ್ಸೊ-ಪೊನಿ-ತ್ರೇಯತ್ ಪ್ರದೇಶದಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಕೈವಾಡ ಇದೆ ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಂಡವು ಸೋಮವಾರ ರಿಯಾಸಿಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದೆ ಮತ್ತು ಎನ್ಐಎಯ ವಿಧಿವಿಜ್ಞಾನ ತಂಡವು ಪುರಾವೆಗಳನ್ನು ಸಂಗ್ರಹಿಸುತ್ತಿದೆ.

ಜೂನ್ 10ರಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಿಯಾಸಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

ಮಾಹಿತಿ ಪಡೆದ ಪ್ರದಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. “ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ ಜತೆ ಘಟನೆಯ ಬಗ್ಗೆ ವಿಚಾರಿಸಿದ್ದೇನೆ. ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ದಾಳಿಕೋರರು ಕಾನೂನಿನ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಹೇಳಿದ್ದಾರೆ.

Exit mobile version