ನವದೆಹಲಿ: “ಸನಾತನ ಧರ್ಮವು (Sanatana Dharma) ಕೊರೊನಾ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿಗೊಳಿಸಿದೆ. ಆದರೆ, ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯನ್ನು ದ್ವೇಷ ಭಾಷಣ ಎಂಬುದಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದೆ.
ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಇವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಕೋರಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ 15 ಜನರಿಗೆ ನೋಟಿಸ್ ಜಾರಿಗೊಳಿಸಿದೆ. ಎ ರಾಜಾ ಕೂಡ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ವಿರುದ್ಧ ಚೆನ್ನೈ ಮೂಲದ ಬಿ. ಜಗನ್ನಾಥ್ ಕೋರ್ಟ್ ಮೊರೆ ಹೋಗಿದ್ದಾರೆ.
Supreme Court issues notice to the Tamil Nadu government and DMK leader Udhayanidhi Stalin for his remarks on 'Sanatan Dharma'
— ANI (@ANI) September 22, 2023
(file pic) pic.twitter.com/8HeBATdwwx
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.
ಇದನ್ನೂ ಓದಿ: Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ
ಉದಯನಿಧಿ ಸ್ಟಾಲಿನ್ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಉದಯನಿಧಿ ಸ್ಟಾಲಿನ್, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.