ನವದೆಹಲಿ: ಕೊಲಿಜಿಯಂ ಅನ್ವಯ ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು ಮಾಡಿದ ಹೆಸರುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡದಿರುವ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನೇಮಕಾತಿ ಆದೇಶ ಹೊರಡಿಸುವಲ್ಲಿ ವಿಳಂಬವಾದ (Wilful Disobedience) ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ನೀಡಿದೆ.
“ನ್ಯಾಯಮೂರ್ತಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನ್ವಯ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ನೇಮಕಾತಿ ಆದೇಶ ಹೊರಡಿಸುವುದಷ್ಟೇ ಬಾಕಿ ಇದೆ. ಆದರೆ, ಆದೇಶ ಹೊರಡಿಸುವುದನ್ನು ವಿಳಂಬ ಮಾಡುವುದು ಸ್ವೀಕಾರಾರ್ಹವಲ್ಲ. ಶಿಫಾರಸು ಮಾಡಿದವರು ತಮ್ಮ ಹೆಸರು ಹಿಂಪಡೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ.
ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ನೇಮಕಾತಿ ಆದೇಶ ಹೊರಡಿಸುವಲ್ಲಿ ಉದ್ದೇಶಪೂರ್ವಕವಾಗಿಯೇ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಅಡ್ವೊಕೇಟ್ ಅಸೋಸಿಯೇಷನ್ ಅರ್ಜಿ ಸಲ್ಲಿಸಿದೆ. ಇದರ ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯವು ನೋಟಿಸ್ ನೀಡಿದೆ.
ಇದನ್ನೂ ಓದಿ | ಕರ್ನಾಟಕ ಹೈಕೋರ್ಟ್‌ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ