Site icon Vistara News

Sonia Gandhi: ರಾಮನ ದರ್ಶನ ಪಡೆಯಲಿರುವ ಸೋನಿಯಾ ಗಾಂಧಿ; ಕಾರ್ಯಕ್ರಮದಲ್ಲಿ ಭಾಗಿ ನಿಶ್ಚಿತ

Sonia Gandhi

Congress will not attend Ram Mandir inauguration, calls it BJP-RSS event

ನವದೆಹಲಿ: 2024ರ ಜನವರಿ 22ರಂದು ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ದೇಶದ ನಾಲ್ಕು ಸಾವಿರ ಸಾಧು-ಸಂತರು ಸೇರಿ 10-15 ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮತ್ತೊಂದೆಡೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ಸಿಪಿಎಂ ಹಾಗೂ ಟಿಎಂಸಿ ಈಗಾಗಲೇ ಘೋಷಿಸಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್‌ ರಂಜನ್‌ ಚೌಧರಿ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ. ಆರಂಭದಲ್ಲಿ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಆದರೀಗ, ಕಾಂಗ್ರೆಸ್‌ ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಸೇರಿ ಉಳಿದ ನಾಯಕರು ಪಾಲ್ಗೊಳ್ಳುವ ಅಥವಾ ಪಾಲ್ಗೊಳ್ಳದಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನವಿದ್ದರೂ ಪಾಲ್ಗೊಳ್ಳುವುದಿಲ್ಲ. ಇದು ಬಿಜೆಪಿಯ ಕಾರ್ಯಕ್ರಮವಾಗಿದೆ ಎಂದು ಸಿಪಿಎಂ ಹೇಳಿದೆ. ಮತ್ತೊಂದೆಡೆ, ಟಿಎಂಸಿ ಕೂಡ ಕಾರ್ಯಕ್ರಮದಲ್ಲಿ ಗೈರಾಗಲು ತೀರ್ಮಾನಿಸಿದೆ ಎನ್ನಲಾಗಿದೆ. “ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶಿವಸೇನೆಗೆ ಕರೆಯುವ ಅವಶ್ಯಕತೆಯಿಲ್ಲ. ಬಹಳ ಹಿಂದಿನಿಂದಲೂ ಶಿವಸೇನೆ ಹಾಗೂ ಅಯೋಧ್ಯೆಗೆ ನಂಟಿದೆ” ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ನಾಯಕ ಸಂಜಯ್‌ ರಾವತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವೆಲ್ಲ ಸೆಲೆಬ್ರಿಟಿಗಳಿಗೆ ಆಹ್ವಾನ?

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ.

ದಕ್ಷಿಣ ಭಾರತದ ಚಿತ್ರರಂಗದ ಗಣ್ಯರಾದ ರಜನಿಕಾಂತ್‌, ಚಿರಂಜೀವಿ, ಮೋಹನ್‌ಲಾಲ್‌, ಧನುಶ್‌, ಪ್ರಭಾಸ್ ಅವರಿಗೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ಕಾಶಿಯ ಭಿಕ್ಷುಕರಿಂದ ಅಯೋಧ್ಯೆ ರಾಮ ಮಂದಿರಕ್ಕೆ ರೂ.4 ಲಕ್ಷ ದೇಣಿಗೆ!

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version