ನವದೆಹಲಿ: ದೇಶಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿರುವ ಚುನಾವಣಾ ಬಾಂಡ್ (Electoral Bond) ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ (Constitution Bench) ವರ್ಗಾಯಿಸಿದೆ. ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 31ರಂದು ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಎಲ್ಲರ ಕಣ್ಣಿವೆ.
ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡಬಹುದಾದ ಚುನಾವಣಾ ಬಾಂಡ್ ಯೋಜನೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಅಕ್ಟೋಬರ್ 10ರಂದು ಅರ್ಜಿಗಳನ್ನು ಪರಿಗಣಿಸಿದ್ದ ಸುಪ್ರೀಂ ಕೋರ್ಟ್, ಅಕ್ಟೋಬರ್ 31 ಹಾಗೂ ನವೆಂಬರ್ 1ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತ್ತು. ಈಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠವು, ಸಾಂವಿಧಾನಿಕ ಪೀಠಕ್ಕೆ ಅರ್ಜಿಗಳನ್ನು ವರ್ಗಾಯಿಸಿದೆ.
ಏನಿದು ಚುನಾವಣಾ ಬಾಂಡ್ ಯೋಜನೆ?
ಚುನಾವಣಾ ಬಾಂಡ್ ಯೋಜನೆಯನ್ನು 2017ರಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಅಧಿವೇಶನದಲ್ಲಿ ಮೊದಲು ಪ್ರಸ್ತಾಪಿಸಿದರು. ಹಣಕಾಸು ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಗಳಿಗೆ ತಿದ್ದುಪಡಿ ತಂದು 2018ರ ಜನವರಿಯಲ್ಲಿ ಚುನಾವಣಾ ಬಾಂಡ್ ಯೋಜನೆ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಯಿತು. ಆ ಮೂಲಕ ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಯಿತು.
ಇದನ್ನೂ ಓದಿ: 2020-21ರಲ್ಲಿ ಪಕ್ಷಗಳಿಗೆ ದೇಣಿಗೆ 41.5% ಇಳಿಕೆ, ಬಿಜೆಪಿಗೆ 477, ಕಾಂಗ್ರೆಸ್‌ಗೆ 74 ಕೋಟಿ ರೂ. ಸಂದಾಯ
ಚುನಾವಣಾ ಬಾಂಡ್ ಯೋಜನೆ ಅಡಿಯಲ್ಲಿ ಭಾರತದ ನಾಗರಿಕ ಅಥವಾ ಭಾರತದಲ್ಲಿ ನೋಂದಣಿಯಾದ ಕಂಪನಿಯು ಯಾವುದೇ ರಾಜಕೀಯ ಪಕ್ಷಕ್ಕೆ ಚುನಾವಣೆ ಬಾಂಡ್‌ಗಳನ್ನು ಖರೀದಿಸುವ ಮೂಲಕ ದೇಣಿಗೆ ನೀಡಬಹುದಾಗಿದೆ. ಭಾರತೀಯ ಸ್ಟೇಟ್ ಬ್ಯಾಂಕ್‌ನ (SBI) ಆಯ್ದ ಶಾಖೆಗಳಲ್ಲಿ 1 ಸಾವಿರ, 10 ಸಾವಿರ, ಲಕ್ಷ, 10 ಲಕ್ಷ ಹಾಗೂ 1 ಕೋಟಿ ರೂ.ವರೆಗೆ ಚುನಾವಣೆ ಬಾಂಡ್ ಖರೀದಿಸಿ ದೇಣಿಗೆ ನೀಡಬಹುದಾಗಿದೆ. ಇಲ್ಲಿ ದೇಣಿಗೆ ನೀಡಿದವರ ಕುರಿತು ಯಾವುದೇ ಮಾಹಿತಿ ಬಹಿರಂಗವಾಗುವುದಿಲ್ಲ. ಹಾಗೆಯೇ, ಇಷ್ಟು ಮೊತ್ತದ ದೇಣಿಗೆಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಹಾಗಾಗಿ, ಯೋಜನೆಯು ವಿವಾದಕ್ಕೆ ಗುರಿಯಾಗಿದ್ದು, ಇದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.