Site icon Vistara News

Baba Ramdev: ಬಾಬಾ ರಾಮದೇವ್‌ ಕ್ಷಮೆ ತಿರಸ್ಕರಿಸಿದ ಸುಪ್ರೀಂ; ಕಠಿಣ ಕ್ರಮದ ಎಚ್ಚರಿಕೆ!

Baba Ramdev

You Are Not So Innocent: Supreme Court Raps Baba Ramdev In Misleading Ads Case

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಬೇಷರತ್‌ ಆಗಿ ಕೇಳಿದ ಕ್ಷಮೆಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಅಷ್ಟೇ ಅಲ್ಲ, “ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿಯೇ ಸರ್ವೋಚ್ಚ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ” ಎಂದು ಚಾಟಿ ಬೀಸಿದೆ. ಹಾಗೆಯೇ, ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.

ಪತಂಜಲಿ ಪರ ವಾದ ಮಂಡಿಸಿದ ಮುಕುಲ್‌ ರೋಹಟಗಿ, “ಮನುಷ್ಯ ಎಂದ ಮೇಲೆ ತಪ್ಪು ಮಾಡುವುದು ಸಹಜ. ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಅಫಿಡವಿಟ್‌ ಮೂಲಕ ಕ್ಷಮೆಯಾಚಿಸಿದ್ದಾರೆ” ಎಂದು ತಿಳಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್‌, “ಪ್ರಕರಣವನ್ನು ಅವರು ಗಂಭೀರವಾಗಿ ತೆಗೆದುಕೊಂಡಿಲ್ಲ. ವಿದೇಶಕ್ಕೆ ತೆರಳಲು ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ ಎಂದು ಹೇಳುತ್ತಾರೆ. ಇದಾದ ಬಳಿಕ ಟಿಕೆಟ್‌ ಬುಕ್‌ ಮಾಡಿಲ್ಲ ಎನ್ನುತ್ತಾರೆ. ಇದು ನ್ಯಾಯಾಂಗ ನಿಂದನೆಯಾಗಿದೆ. ಕೋರ್ಟ್‌ಗೆ ಸುಳ್ಳು ಸಾಕ್ಷ್ಯ ನೀಡಿದಂತಾಗಿದೆ. ನಾವು ಕ್ಷಮೆಯನ್ನು ತಿರಸ್ಕರಿಸುತ್ತಿದ್ದೇವೆ” ಎಂದು ಕೋರ್ಟ್‌ ಸ್ಪಷ್ಟಪಡಿಸಿತು. ಅಷ್ಟೇ ಅಲ್ಲ, ಏಪ್ರಿಲ್‌ 16ಕ್ಕೆ ವಿಚಾರಣೆಯನ್ನು ಮುಂದೂಡಲಾಯಿತು. ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಅಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚಿಸಿತು.

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Patanjali Advertising Case: ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಾಬಾ ರಾಮ್‌ದೇವ್‌ಗೆ ಸೂಚಿಸಿದ ಸುಪ್ರೀಂ ಕೋರ್ಟ್‌

Exit mobile version