Site icon Vistara News

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

Train Accident

Train Accident

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಪಶ್ಚಿಮ ಬಂಗಾಳದ ಸೀಲ್ಡಾಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ (Train Accident). ಇದೀಗ ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಲಾಗಿದೆ.

ಆಘಾತ ವ್ಯಕ್ತಪಡಿಸಿದ ಮೋದಿ

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ʼʼಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ದುರಂತದ ಸುದ್ದಿ ಕೇಳಿ ಆಘಾತವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಮಾತುಕಡೆ ನಡೆಸಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಸ್ಥಳ ಪರಿಶೀಲನೆ ನಡೆಸಲಿದ್ದಾರೆʼʼ ಎಂದು ಹೇಳಿದ್ದಾರೆ.

ಪರಿಹಾರ ಧನ ಘೋಷಣೆ

ಇದರ ಜತೆಗೆ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಈತನ್ಮಧ್ಯೆ ಡಾರ್ಜಿಲಿಂಗ್‌ಗೆ ತೆರಳುತ್ತಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತರ ಸಂಬಂಧಿಕರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ. ಘಟನೆ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತಿತರರು ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮಮತಾ ಬ್ಯಾನರ್ಜಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರಣವೇನು?

ಸೀಲ್ಡಾಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಹೊಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿವೆ. ದುರಂತ ಯಾಕೆ ಸಂಭವಿಸಿತು ಎನ್ನುವುದನ್ನು ಕಂಡುಕೊಳ್ಳಲು ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗೂಡ್ಸ್‌ ರೈಲಿನ ಲೋಕೋ ಪೈಲಟ್‌ ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಗಾರ್ಡ್‌ ಕೂಡ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೂಡ್ಸ್ ರೈಲು ಸಿಗ್ನಲ್ ಅನ್ನು ಜಂಪ್‌ ಮಾಡಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಹಿಂಭಾಗದ ಪಾರ್ಸೆಲ್ ಬೋಗಿಗೆ ಡಿಕ್ಕಿ ಹೊಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ʼʼರಕ್ಷಣಾ ಕಲಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ನೆರವಿಗೆ ಧಾವಿಸಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರಗರ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಮೇಲ್ವಿಚಾರಣೆ ನಡೆಸುತ್ತಿದ್ದಾರೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Exit mobile version