Site icon Vistara News

Tunnel Collapses: ನಿರ್ಮಾಣ ಹಂತದ ಸುರಂಗ ಕುಸಿದು 40 ಜನ ಸಿಲುಕಿರುವ ಶಂಕೆ; ರಕ್ಷಣೆಗೆ ಹರಸಾಹಸ

Tunnel Collapses

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ (Uttarkashi District) ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ಕುಸಿದಿದ್ದು (Tunnel Collapses), ಸುಮಾರು 40 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಸುರಂಗ ಕುಸಿದ ಜಾಗಕ್ಕೆ ಆಗಮಿಸಿದ್ದು, ಕಾರ್ಮಿಕರ ರಕ್ಷಣೆಗೆ ಭರದಿಂದ ಕಾರ್ಯಾಚರಣೆ ನಡೆಯುತ್ತಿದೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿದೆ. ಭಾನುವಾರ ಬೆಳಗಿನ (ನವೆಂಬರ್‌ 12) ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿದೆ ಎಂದು ತಿಳಿದುಬಂದಿದೆ.

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದಾರೆ. ಒಂದಷ್ಟು ಕಾರ್ಮಿಕರು ಸುರಂಗದ ಒಳಗೆ ಸಿಲುಕಿದರೆ, ಇನ್ನಷ್ಟು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಾರ್ಮಿಕರ ರಕ್ಷಣೆಗೆ ಎಲ್ಲ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯ ಸರ್ಕಾರವು ಅಧಿಕಾರಿಗಳಿಗೆ ಸೂಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Rain News : ಸೇತುವೆ ದಾಟುವಾಗ ಕೊಚ್ಚಿ ಹೋದ ಶಿಕ್ಷಕ! ಗೋಡೆ ಕುಸಿದು ವೃದ್ಧ ಸಾವು

“ಸಿಲ್‌ಕ್ಯಾರ ಸುರಂಗದ ಸುಮಾರು 150 ಮೀಟರ್‌ ಭಾಗವು ಕುಸಿದಿದೆ. ಭಾನುವಾರ ಬೆಳಗಿನ ಜಾವ ಸುರಂಗದ ಕಾಮಗಾರಿ ನಡೆಯುವಾಗಲೇ ಕುಸಿದಿದೆ. ಕೂಡಲೇ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸಿಬ್ಬಂದಿಯೂ ರಕ್ಷಣೆಗೆ ಕೈ ಜೋಡಿಸಿದ್ದಾರೆ. ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಕೆಲವೇ ಗಂಟೆಗಳಲ್ಲಿ ಎಲ್ಲ ಕಾರ್ಮಿಕರನ್ನು ರಕ್ಷಿಸಲಾಗುವುದು” ಎಂದು ಉತ್ತರಕಾಶಿ ಎಸ್ಪಿ ಅರ್ಪಣ್‌ ಯದುವಂಶಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version