ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-2025ನೇ ಸಾಲಿನ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ (Union Budget 2024) ಮಾಡಲಿದ್ದು, ಶ್ರೀಮಂತರಿಂದ ಹಿಡಿದು ಬಡವರವರೆಗೆ ಎಲ್ಲ ವರ್ಗದವರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಬಜೆಟ್‌ನಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಿಸಿದ ನಿರೀಕ್ಷೆಗಳು ಏನು ಎಂಬುದರ ಮಾಹಿತಿ ಇಲ್ಲಿದೆ.
ಸೆಕ್ಷನ್ 80 ಸಿ ಅಡಿಯಲ್ಲಿ ವಿನಾಯಿತಿ ಮೊತ್ತ ಹೆಚ್ಚಳ
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ಸಂಬಳದಾರರು ಹೂಡಿಕೆ ಹಾಗೂ ವೆಚ್ಚಗಳ ಮೇಲೆ ವಾರ್ಷಿಕವಾಗಿ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯುತ್ತಾರೆ. ಗೃಹ ಸಾಲದ ಅಸಲು, ಬಡ್ಡಿ, ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತ, ಪಿಪಿಎಫ್ ಹೂಡಿಕೆ ಸೇರಿ ಹಲವು ರೀತಿಯ ಹೂಡಿಕೆಗಳು ಹಾಗೂ ವೆಚ್ಚಗಳ ಮೂಲಕ 1.5 ಲಕ್ಷರೂ.ಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಈ ಮೊತ್ತವನ್ನು ಕೇಂದ್ರ ಸರ್ಕಾರವು 1.5 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ.
ಹೊಸ ತೆರಿಗೆಯ ಸ್ಲ್ಯಾ ಬ್ ಹೀಗಿದೆ
ಆದಾಯ | ವಿಧಿಸುವ ತೆರಿಗೆ |
0-3 ಲಕ್ಷ ರೂ. | ತೆರಿಗೆ ಇರಲ್ಲ |
3-6 ಲಕ್ಷ ರೂ. | 5% |
6-9 ಲಕ್ಷ ರೂ. | 10% |
9-12 ಲಕ್ಷ ರೂ. | 15% |
12-15 ಲಕ್ಷ ರೂ. | 20% |
15 ಲಕ್ಷ ರೂ.ಗಿಂತ ಹೆಚ್ಚು | 30% |
ಸ್ಟಾಂಡರ್ಡ್ ಡಿಡಕ್ಷನ್ ಮೊತ್ತದ ಹೆಚ್ಚಳ
ಸಂಬಳ ಪಡೆಯುವ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನು 70 ಸಾವಿರ ರೂ. ಅಥವಾ ಒಂದು ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್ ಡಿಡಕ್ಷನ್ ಇದೆ. ಇದನ್ನು, 1 ಲಕ್ಷ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್ ಡಿಡಕ್ಷನ್ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್ ಡಿಡಕ್ಷನ್ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.
ಹೊಸ ತೆರಿಗೆ ಸ್ಲ್ಯಾಬ್ ಘೋಷಣೆ ಸಾಧ್ಯತೆ
“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.
ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ
ನಿರ್ಮಲಾ ಸೀತಾರಾಮನ್ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್ ಅವರು ಮುರಿಯಲಿದ್ದಾರೆ.
ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು