Site icon Vistara News

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Union Budget 2024

Union Budget 2024: Government Mulls Doubling Ayushman Bharat Beneficiaries, Insurance Amount

ನವದೆಹಲಿ: ದೇಶದ ಜನ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ (Ayushman Bharat) ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

Ayushman Bharat Yojana

ಬೇರೆ ನಿರೀಕ್ಷೆಗಳೂ ಇವೆ

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಜುಲೈ 23ರಂದು ಕೇಂದ್ರ ಬಜೆಟ್‌ ಮಂಡನೆ; ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?

Exit mobile version