ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್ ಮಂಡಿಸಲು (Union Budget 2024) ಸಿದ್ಧತೆ ನಡೆಸಿದ್ದಾರೆ. ಇನ್ನು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ಮಿತಿಯನ್ನು 3 ಲಕ್ಷ ರೂಪಾಯಿಯಿಂದ (ಹೊಸ ತೆರಿಗೆ ಪದ್ಧತಿ) 5 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ದೇಶದಲ್ಲಿ ಈಗ ಹಳೆಯ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ಧತಿ ಚಾಲ್ತಿಯಲ್ಲಿವೆ. ಆದಾಯ ತೆರಿಗೆ ಪಾವತಿದಾರರು ಯಾವ ತೆರಿಗೆ ಪದ್ಧತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದೆ. ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರಿಗೆ 3 ಲಕ್ಷ ರೂ.ವರೆಗೆ ವಿನಾಯಿತಿ ಇದೆ. ಈಗ ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಗರಿಷ್ಠ ತೆರಿಗೆ ಪ್ರಮಾಣವನ್ನು ಶೇ.30ರಿಂದ ಶೇ.25ಕ್ಕೆ ಇಳಿಸಬೇಕು ಎಂಬ ಒತ್ತಾಯವಿದ್ದು, ಇದನ್ನು ಈಡೇರಿಸುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಲಾಗತ್ತಿದೆ.
ಹೊಸ ತೆರಿಗೆಯ ಸ್ಲ್ಯಾ ಬ್ ಹೀಗಿದೆ
ಆದಾಯ | ವಿಧಿಸುವ ತೆರಿಗೆ |
0-3 ಲಕ್ಷ ರೂ. | ತೆರಿಗೆ ಇರಲ್ಲ |
3-6 ಲಕ್ಷ ರೂ. | 5% |
6-9 ಲಕ್ಷ ರೂ. | 10% |
9-12 ಲಕ್ಷ ರೂ. | 15% |
12-15 ಲಕ್ಷ ರೂ. | 20% |
15 ಲಕ್ಷ ರೂ.ಗಿಂತ ಹೆಚ್ಚು | 30% |
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.
ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ
ನಿರ್ಮಲಾ ಸೀತಾರಾಮನ್ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್ ಅವರು ಮುರಿಯಲಿದ್ದಾರೆ.
ಇದನ್ನೂ ಓದಿ: Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್ ಮಾಡಿ