Site icon Vistara News

Gyanvapi Case: ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್‌ ಅಸ್ತು; ಹಿಂದುಗಳಿಗೆ ಭಾರಿ ಮುನ್ನಡೆ

Gyanvapi mosque survey

ವಾರಾಣಸಿ: ಕಾಶಿ ವಿಶ್ವನಾಥ ದೇವಾಲಯಕ್ಕೆ ಅಂಟಿಕೊಂಡಂತಿರುವ ಜ್ಞಾನವಾಪಿ (Gyanvapi Case) ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ವಾರಾಣಸಿ ನ್ಯಾಯಾಲಯವು ಅನುಮತಿ ನೀಡಿದೆ. ಇದರಿಂದಾಗಿ ಹಿಂದು ಅರ್ಜಿದಾರರಿಗೆ ಭಾರಿ ಮುನ್ನಡೆ ಸಿಕ್ಕಂತಾಗಿದೆ. ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ISI) ವೈಜ್ಞಾನಿಕ ಸಮೀಕ್ಷೆ ನಡೆಸಲಿದೆ. ಇನ್ನು, ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೂ ಮುನ್ನ ಅಂದರೆ, ಆಗಸ್ಟ್‌ 4ರೊಳಗೆ ಅಧ್ಯಯನ ವರದಿ ನೀಡಬೇಕು ಎಂದು ಐಎಸ್‌ಐಗೆ ಕೋರ್ಟ್‌ ಸೂಚಿಸಿದೆ.

ಮಾಹಿತಿ ನೀಡಿದ ಹಿಂದುಗಳ ಪರ ವಕೀಲ

ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದುಗಳು ಸಲ್ಲಿಸಿದ್ದ ಅರ್ಜಿಗೆ ಮಸೀದಿ ಆಡಳಿತ ಮಂಡಳಿಯು ಆಕ್ಷೇಪ ವ್ಯಕ್ತಪಡಿಸಿತ್ತು. ಜುಲೈ 14ರಂದು ವಾದ-ಪ್ರತಿವಾದದ ಆಲಿಕೆಯನ್ನು ನ್ಯಾಯಾಲಯವು ಮುಗಿಸಿತ್ತು. ಅದರಂತೆ, ಶುಕ್ರವಾರ ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಅವರು ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ್ದಾರೆ.

“ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ಕುರಿತಂತೆ ನಾವು ಸಲ್ಲಿಸಿದ ಅರ್ಜಿಯನ್ನು ವಾರಾಣಸಿ ನ್ಯಾಯಾಲಯವು ಪುರಸ್ಕರಿಸಿದೆ. ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆ ನಡೆಸಲಿದೆ. ನಾವು ಕೂಡ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹಿಂದುಗಳ ಪರ ವಕೀಲ ವಿಷ್ಣು ಶಂಕರ್‌ ಜೈನ್‌ ಅವರು ಕೋರ್ಟ್‌ ತೀರ್ಪಿನ ಬಳಿಕ ಸುದ್ದಿಗಾರರಿಗೆ ತಿಳಿಸಿದರು. ಇನ್ನು, ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮಸೀದಿ ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸುತ್ತಲೇ ವಾರಾಣಸಿಯಲ್ಲಿ ಹರ ಹರ ಮಹಾದೇವ್‌ ಎಂಬ ಘೋಷಣೆಗಳು ಮೊಳಗಿದವು.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿಯ ಶಿವಲಿಂಗ ಕಾರ್ಬನ್ ಡೇಟಿಂಗ್ ಪರೀಕ್ಷೆ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದು ಮಹಿಳೆಯರು 2021ರಲ್ಲಿ ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೊ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದ್ದು, ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿತ್ತು.

Exit mobile version