ಮುಂಬೈ: ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ ಕೈಗೊಳ್ಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ (Veer Savarkar) ಅವರ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಅವರೇ ರಾಹುಲ್ ಹೇಳಿಕೆಯನ್ನು ವಿರೋಧಿಸಿದ್ದಾರೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ವೀರ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರು ವೀರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಂಜಿತ್ ದೂರು ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ಹೇಳಿದ್ದೇನು?
“ವೀರ ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಹಾಗೆಯೇ, ನಾನು ನಿಮ್ಮ ವಿಧೇಯ ಸೇವಕ ಎಂಬುದಾಗಿ ಕ್ಷಮಾಪಣೆ ಕೇಳಿದ್ದರು. ಅವರು ಪತ್ರದಲ್ಲಿ ಸಹಿ ಮಾಡಿರುವ ದಾಖಲೆಯು ನನ್ನ ಬಳಿ ಇದೆ” ಎಂದು ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಆಕ್ಷೇಪ
ಮಿತ್ರ ಪಕ್ಷವಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಕುರಿತು ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಉದ್ಧವ್ ಠಾಕ್ರೆ ಖಂಡಿಸಿದ್ದಾರೆ. “ಸಾವರ್ಕರ್ ಅವರ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಸಾವರ್ಕರ್ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಸ್ವಾತಂತ್ರ್ಯ ಹೋರಾಟಗಾರರ ಕುರಿತು ಇರುವ ಗೌರವವನ್ನು ಯಾರು ಎಷ್ಟೇ ಪ್ರಯತ್ನಿಸಿದರೂ ಅಳಿಸಿಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ | ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಪೋಸ್ಟರ್ನಲ್ಲಿ ವೀರ ಸಾವರ್ಕರ್ ಫೋಟೋ !; ಪ್ರಿಂಟ್ ಮಿಸ್ಟೇಕ್?