ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ (40 percent commission) ಆರೋಪ ಮಾಡಿದ್ದ ಕಾಂಗ್ರೆಸ್ ಕಳೆದ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಟಿವಿ ಸೇರಿದಂತೆ ಮಾಧ್ಯಮಗಳಲ್ಲಿ ಈ ಕುರಿತು ಜಾಹೀರಾತು ನೀಡಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ಗೆ (DK Shivakumar) ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಖುದ್ದು ಹಾಜರಾಗುವಂತೆ ಸೂಚಿಸಿದೆ.
ವಿಧಾನಸಭೆ ಚುನಾವಣೆ ವೇಳೆ ರಾಜ್ಯ ಬಿಜೆಪಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಆರೋಪ ಮಾಡಿತ್ತು. ಅಲ್ಲದೆ, ಈ ಸಂಬಂಧ ಜಾಹೀರಾತನ್ನು ಸಹ ನೀಡಿತ್ತು. ಹೀಗಾಗಿ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ
ಈ ಸಂಬಂಧ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಬಿಜೆಪಿಗೆ ಡ್ಯಾಮೇಜ್ ಮಾಡಿದ್ದ 40 ಪರ್ಸೆಂಟ್ ಅಭಿಯಾನ
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ 40 ಪರ್ಸೆಂಟ್ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್ ಆಗಿತ್ತು. ಈ ಸಂಬಂಧ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಸಮನ್ಸ್ ಜಾರಿ ಮಾಡಲಾಗಿದೆ.
ಶ್ರೀರಾಮುಲುಗೆ ಹೈಕೋರ್ಟ್ ತರಾಟೆ
ಕಳೆದ ವಿಧಾಣಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನಾಲ್ಕು ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮುಂದಿನ ವಿಚಾರಣೆಗೆ ವಿಚಾರಣೆಗೆ ಹಾಜರಾಗಲೇ ಬೇಕು ಎಂದು ಆದೇಶಿಸಿದೆ.
ಇದನ್ನೂ ಓದಿ: Karnataka Politics: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ‘ನಿರ್ಣಯ’ ಕದನ; ಅಶೋಕ್ ಬಿಟ್ಟ ಅನುದಾನದ ಬಾಣ
ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾಗಿರುವ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗಬೇಕು. ತಪ್ಪಿದರೆ ಕಠಿಣ ಕ್ರಮಕ್ಕೆ ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.