Site icon Vistara News

Lakshmi Hebbalkar: ಕ್ಷಮಿಸಿ, ಬೆಳಗಾವಿ ಎಂದೆಂದಿಗೂ ಕರ್ನಾಟಕದ್ದೇ; ಸ್ಪಷ್ಟೀಕರಣ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

Lakshmi Hebbalkar

ಬೆಂಗಳೂರು: ಬೆಳಗಾವಿ (Belagavi border) ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮನವಿ ಮಾಡಿದ್ದಾರೆ.

ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಸಭೆ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ: Congress Karnataka: ಅಪಪ್ರಚಾರ ಬಿಡಿ, ಸರ್ಕಾರದಲ್ಲಿ ದುಡ್ಡಿಲ್ಲ ಎನ್ನಬೇಡಿ: ಸ್ವಪಕ್ಷ ನಾಯಕರ ಮೇಲೆ ಸಿದ್ದರಾಮಯ್ಯ ಕಿಡಿ

ನಾನು ಮುಂಬೈ ಪ್ರಾಂತ್ಯ ಎಂದು ಹೇಳುವ ಬದಲು ಬಾಯಿ ತಪ್ಪಿ ಮಹಾರಾಷ್ಟ್ರ ಎಂದೇ. ಅದನ್ನು ತಪ್ಪಾಗಿ ಯಾರೂ ಸಹ ಅರ್ಥೈಸಬೇಡಿ. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರ ರಾಜ್ಯವೇ ಇರಲಿಲ್ಲ‌ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದೇನು?

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್‌, ಕನ್ನಡ ಭಾಷೆಗೆ ಬಹಳಷ್ಟು ವರ್ಷಗಳ ಇತಿಹಾಸವಿದೆ ಎಂಬುದನ್ನು ಸಾಹಿತಿಗಳು ತೋರಿಸಿಕೊಟ್ಟಿದ್ದಾರೆ. ನಮ್ಮ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ನಮ್ಮ ಭಾಷೆ, ಕಲೆ, ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ನಾವು ಈ ನಾಡಿನಲ್ಲಿ ಜನ್ಮ ಪಡೆಯಲು ಪುಣ್ಯ ಮಾಡಿರಬೇಕು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಹೇಳಿದ್ದರು. ಅಂದರೆ, ಏಕೀಕರಣ ಸಂದರ್ಭದಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಿತು ಎಂಬ ಅರ್ಥದಲ್ಲಿ ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದರು.

ಅಂದೇ ಸ್ಪಷ್ಟೀಕರಣ ನೀಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್

‌ಈ ಬಗ್ಗೆ ವಿವಾದವಾಗುತ್ತಿದ್ದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟೀಕರಣ ನೀಡಿದ್ದರು. “ನಾನು ಕಾರದಗಾದ ಕನ್ನಡ ಸಮಾವೇಶದಲ್ಲಿ ಆಡಿದ ಮಾತುಗಳಿಗೆ ಸ್ಪಷ್ಟನೆ ನೀಡಬಯಸುತ್ತೇನೆ. ನಾನು ಹೆಮ್ಮೆಯ ಕನ್ನಡತಿಯಾಗಿ, ಕನ್ನಡದ ಮೇಲೆ ವಿಶೇಷವಾದ ಅಭಿಮಾನ ಇಟ್ಟುಕೊಂಡಿದ್ದೇನೆ. ಗಡಿ ಭಾಗದಲ್ಲಿ ಇಷ್ಟೊಂದು ಉತ್ಸಾಹದಿಂದ ಅಲ್ಲಿನ ಕನ್ನಡಿಗರು – ಮರಾಠಿ ಭಾಷಿಕರೆಲ್ಲ ಸೇರಿ ಕನ್ನಡ ಸಮಾವೇಶ ನಡೆಸುತ್ತಿರುವುದನ್ನು ತಿಳಿದು, ಅವರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮತ್ತು ಅವರಲ್ಲಿ ಉತ್ಸಾಹ ತುಂಬುವ ಉದ್ದೇಶದಿಂದ ಅಲ್ಲಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದೇನೆ. ಕನ್ನಡಿಗರಿಗೆ ಸ್ಫೂರ್ತಿ ತುಂಬುವ ಭರದಲ್ಲಿ ಅಲ್ಲಿ ನಾನು ಆಡಿದ ಮಾತುಗಳ ಸಕಾರಾತ್ಮಕತೆಯನ್ನು ಅರ್ಥೈಸಿಕೊಳ್ಳಬೇಕೆಂದು ಮಾಧ್ಯಮದ ಸ್ನೇಹಿತರಲ್ಲಿ ವಿನಂತಿಸುತ್ತೇನೆ. ಇದರ ಬದಲಾಗಿ ಬೇರೆ ರೀತಿಯಲ್ಲಿ ಅರ್ಥೈಸುವುದರಿಂದ ಅದು ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ಹಿನ್ನಡೆಯನ್ನುಂಟು ಮಾಡಬಹುದು.

ಇದನ್ನೂ ಓದಿ: Congress Guarantee: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಮಾಸಿಕ 50 ಸಾವಿರ ರೂ.; ರಾಜ್ಯಾದ್ಯಂತ ಎಷ್ಟು ಅಧ್ಯಕ್ಷರು, ಉಪಾಧ್ಯಕ್ಷರು?

ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು, ಹಿಂದಿನಿಂದಲೂ ಕನ್ನಡಿಗರು – ಮರಾಠಿ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದೇವೆ. ಈ ಅನ್ಯೋನ್ಯತೆ ಮುಂದುವರಿಯಬೇಕು ಎನ್ನುವ ಆಶಯವನ್ನು ನಾನು ವ್ಯಕ್ತಪಡಿಸಿದ್ದೇನೆ. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರ ರಾಜ್ಯವೇ ಅಸ್ತಿತ್ವದಲ್ಲೇ ಇಲ್ಲದ್ದರಿಂದ ಅಂತಹ ಅರ್ಥ ಕಲ್ಪಿಸುವ ಪ್ರಶ್ನೆಯೇ ಬರುವುದಿಲ್ಲ. ಕಾರದಗಾ ಕನ್ನಡ ಸಮಾವೇಶಕ್ಕೆ ಮುಂದಿನ ವರ್ಷದಿಂದ ರಾಜ್ಯ ಸರ್ಕಾರದ ಆರ್ಥಿಕ ಸಹಾಯ ಒದಗಿಸುವ ಮತ್ತು ಅಲ್ಲಿನ ಸಂಘಟನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡಿಸಲು ಪ್ರಯತ್ನಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡುವ ಮೂಲಕ ಅವರ ಉತ್ಸಾಹವನ್ನು ಹೆಚ್ಚಿಸಿದ್ದೇನೆ. ಅವರ ಉತ್ಸಾಹವನ್ನು ನಾವು, ನೀವೆಲ್ಲ ಸೇರಿ ಇನ್ನಷ್ಟು ಹೆಚ್ಚಿಸೋಣ, ಬರುವ ವರ್ಷಗಳಲ್ಲಿ ಈ ಸಮಾವೇಶ ಇನ್ನಷ್ಟು ಅದ್ಧೂರಿಯಾಗಿ ನಡೆಯುವಂತೆ ಮಾಡೋಣ ಎಂದು ವಿನಂತಿಸುತ್ತೇನೆ” ಎಂದು ಸ್ಪಷ್ಟನೆ ನೀಡಿದ್ದರು.

Exit mobile version