ನವ ದೆಹಲಿ: ನಿಖಿಲ್ ಕುಮಾರಸ್ವಾಮಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸ್ಪರ್ಧೆ ಮಾಡುವುದಿಲ್ಲ. ಅವರು ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಆದರೆ, ಬಿಜೆಪಿ – ಜೆಡಿಎಸ್ ಮೈತ್ರಿಯ (BJP JDS Alliance) ಭಾಗವಾಗಿ ಕೇಂದ್ರದಲ್ಲಿ ಮಂತ್ರಿ ಆಗುತ್ತೀರಾ ಎಂಬ ಪ್ರಶ್ನೆಗೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.
ಅವರು ನವ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.
ಜನವರಿ ಅಂತ್ಯದ ಹೊತ್ತಿಗೆ ಕ್ಷೇತ್ರ ಹಂಚಿಕೆ
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ ಎಂದ ಎಚ್‌ಡಿಕೆ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ಯಾರ ಹಣೆಯ ಮೇಲೆ ಏನು ಬರೆದಿದೆಯೋ ಅಂತ ಗೊತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ. ಅಜಿತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.
ಪ್ರಧಾನಿಗಳ ಭೇಟಿ ಬಗ್ಗೆ ಎಚ್‌ಡಿಕೆ ಹರ್ಷ
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಡೆ ಬಗ್ಗೆ ಕಟು ಟೀಕೆ:
ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.
ಈ ವೈಫಲ್ಯದ ಬಗ್ಗೆ ಕಾಂಗ್ರೆಸ್ಸಿಗರು ಯಾಕೆ ಚರ್ಚೆ ಮಾಡುತ್ತಿಲ್ಲ? ಎಂದು ಪ್ರಶ್ನೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಕರ್ನಾಟಕದಲ್ಲಿ ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ 24+4 ಫಾರ್ಮುಲಾ? ಆ 4 ಕ್ಷೇತ್ರ ಯಾವುದು?
ಪ್ರಧಾನಿ ಜತೆ ಯಾವೆಲ್ಲ ವಿಷಯಗಳ ಚರ್ಚೆ?
ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯ ರಾಜಕೀಯ ಪರಿಸ್ಥಿತಿ, ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಜತೆ ಚರ್ಚೆ ನಡೆಸಿದರು. ಅಲ್ಲದೆ, ನಾಫೆಡ್ ಮೂಲಕ ಕೊಬ್ಬರಿಯನ್ನು ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ, ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಸಿ.ಎನ್. ಬಾಲಕೃಷ್ಣ ಜತೆಯಲ್ಲಿದ್ದರು.