Site icon Vistara News

BJP Karnataka: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬಸವರಾಜ ಬೊಮ್ಮಾಯಿ

Kalaburgi Rudraiyya join BJP

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿಯೂ ಬಿಜೆಪಿ (BJP Karnataka) ಎಲ್ಲ ಸ್ಥಾನವನ್ನು ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಇಂದು ನಿವೃತ್ತ ಅಧಿಕಾರಿ ಆರ್. ರುದ್ರಯ್ಯ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಬಸವರಾಜ ಬೊಮ್ಮಾಯಿ, ಇಡೀ ದೇಶದ ಜನರು ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಯವರ ಕಡೆ ನೋಡುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬಿಜೆಪಿ, ಮೊದಿ ಅಲೆ ಇದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ ಬರುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಇಪ್ಪತೈದು ಕ್ಷೇತ್ರಗಳಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಲಿದೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣದಲ್ಲಿಯೂ ಅಚ್ಚರಿಯ ಫಲಿತಾಂಶ ಬರಲಿದೆ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ದಲಿತರು ಭ್ರಮನಿರಸನಗೊಂಡಿದ್ದಾರೆ

ಎಸ್‌ಸಿ, ಎಸ್‌ಟಿ ಸಮುದಾಯದವರು ಕಾಂಗ್ರೆಸ್ ಬಗ್ಗೆ ಭ್ರಮ ನಿರಸನಗೊಂಡಿದ್ದಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿಗೆ ಜಾತಿಗಳನ್ನು ಸೇರಿಸಿದರು. ಆದರೆ, ಮೀಸಲಾತಿ ಹೆಚ್ಚಳ ಮಾಡಲಿಲ್ಲ. ನಾನು ಸಿಎಂ ಆಗಿದ್ದಾಗ ಎಸ್‌ಸಿ ಮೀಸಲಾತಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ ಶೇ. 4ಕ್ಕೆ ಹೆಚ್ಚಳ ಮಾಡಿದ್ದೇವೆ. ಇದರಿಂದ ಎಂಜಿನಿಯರಿಂಗ್ ಸೀಟ್‌ನಲ್ಲಿ ಐದು ಸಾವಿರ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ ಸಿಕ್ಕಿದೆ. ಮೆಡಿಕಲ್‌ನಲ್ಲಿಯೂ ನೂರು ವಿದ್ಯಾರ್ಥಿಗಳಿಗೆ ಹೆಚ್ಚಿಗೆ ಅವಕಾಶ ಸಿಕ್ಕಿದೆ. ಅದೇ ರೀತಿ ಕೆಪಿಎಸ್‌ಸಿಯಲ್ಲಿ ನಡೆಯುವ ನೇಮಕಾತಿಯಲ್ಲೂ ಮೀಸಲಾತಿ ಹೆಚ್ಚಳವಾಗಲಿದೆ. ಏಕೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ಜಾರಿಗೆ ತಂದಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್‌ನಿಂದ ದಲಿತರಿಗೆ ಆಗಿರುವ ಅನ್ಯಾಯ ಸಾಕಷ್ಟಿದೆ

ರಾಜ್ಯ ಸರ್ಕಾರ ಎಸ್ಸಿಪಿ, ಟಿಎಸ್‌ಪಿಯ 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿ, ದಲಿತರಿಗೆ ಅನ್ಯಾಯ ಮಾಡಿ ರಾಜಕೀಯ ಯೋಜನೆಗಳನ್ನು ಜಾರಿಗೆ ತಂದಿದೆ. ದಲಿತರ. ಹಣ ಅವರಿಗೆ ಇದ್ದಿದ್ದರೆ, ಆ ಸಮುದಾಯಗಳ ಕಾಲೋನಿಗಳು, ರಸ್ತೆಗಳ ಅಭಿವೃದ್ಧಿಗೆ ಬಳಕೆಯಾಗುತ್ತಿತ್ತು. ಕಾಂಗ್ರೆಸ್‌ನಿಂದ ದಲಿತರಿಗೆ ಆಗಿರುವ ಅನ್ಯಾಯ ಸಾಕಷ್ಟಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: CM Siddaramaiah: ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಟ್ಟ ಮೋದಿ: ಸಿದ್ದರಾಮಯ್ಯ ಲೇವಡಿ

ನಿರೀಕ್ಷೆ ಇಟ್ಟುಕೊಳ್ಳಬೇಡಿ

ರುದ್ರಯ್ಯ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಮಾಡಿದ್ದಾರೆ. ಎಂಜಿನಿಯರ್ ಆಗಿ ರಾಜ್ಯದ ಎಲ್ಲ ಭಾಗದಲ್ಲಿ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಅನೇಕ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಶ್ರಮಿಸಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ಅವರ ಶಕ್ತಿ ದೊಡ್ಡದಿದೆ. ಪಕ್ಷಕ್ಕೆ ಬಂದ ತಕ್ಷಣ ಅಧಿಕಾರ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬಾರದು. ನಿರೀಕ್ಷೆ ಇಲ್ಲದೆ ಕೆಲಸ ಮಾಡಿದರೆ ಒಳ್ಳೆಯ ಅವಕಾಶಗಳು ದೊರೆಯುತ್ತವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಾಸಕ ಶಿವರಾಜ ಪಾಟೀಲ್ ಹಾಜರಿದ್ದರು.

Exit mobile version