ಬೆಂಗಳೂರು: ರಾಜ್ಯದಲ್ಲಿ ಹಾಲಿ ಎಲ್ಲ ಬಿಜೆಪಿ ಶಾಸಕರಿಗೂ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎನ್ನುವುದನ್ನು (BJP Politics) ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕಲಬುರ್ಗಿ ವಿಭಾಗದಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಪೂರ್ವಭಾವಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಜನ ಸೇರುತ್ತಿಲ್ಲ. ನಮ್ಮ ಯಾತ್ರೆಯಲ್ಲಿ ಉತ್ಸಾಹದಿಂದ ಜನರು ಸೇರುತ್ತಿದ್ದಾರೆ. ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ ಜೀ ಮತ್ತಿತರ ನಾಯಕರ ಭೇಟಿಯು ಬಿಜೆಪಿ ಬಲವನ್ನು ಹೆಚ್ಚಿಸಿದೆ ಎಂದು ತಿಳಿಸಿದರು.
ಎಲ್ಲ ಶಾಸಕರಿಗೂ ಟಿಕೆಟ್ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಾಲ್ಕಾರು ಜನರನ್ನು ಹೊರತುಪಡಿಸಿ ಉಳಿದ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗುತ್ತದೆ ಎಂದಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಚುನಾವಣೆ ನಂತರದಲ್ಲಿ ಶಾಸಕಾಂಗ ಪಕ್ಷವು ಸಭೆ ಸೇರಿ ನಾಯಕನನ್ನು ಆಯ್ಕೆ ಮಾಡುತ್ತದೆ ಎಂದಿದ್ದಾರೆ.
ಬಿಜೆಪಿಯಲ್ಲಿ ಹಾಲಿ ಶಾಸಕರಾದ ರವಿಸುಬ್ರಹ್ಮಣ್ಯ, ಮಾಡಾಳ್ ವಿರೂಪಾಕ್ಷಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್, ಶಿವರಾಜ್ ಪಾಟೀಲ್ (ರಾಯಚೂರು), ಉದಯ್ ಗರುಡಾಚಾರ್, ಎಂ.ಪಿ ಕುಮಾರಸ್ವಾಮಿ, ನೆಹರು ಓಲೇಕಾರ್, ಜ್ಯೋತಿ ಗಣೇಶ್‌ಗೆ ಟಿಕೆಟ್ ಕೈತಪ್ಪುತ್ತದೆಯೇ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಕೇವಲ ಟೀಕೆ ಮಾಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ. ಜವಾಬ್ದಾರಿಯುತ ನಾಯಕರಾದ ರಮೇಶ್‍ಕುಮಾರ್ ಅವರು, ನಾವೆಲ್ಲ ಸಾಕಷ್ಟು ಮಾಡಿಕೊಂಡಿದ್ದೇವೆ; ತೃಪ್ತಿ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಉತ್ತರ ಕೊಡಬೇಕು.
ಲೋಕಾಯುಕ್ತವನ್ನು ಮುಚ್ಚಿಸಿದ್ದಕ್ಕೆ ಉತ್ತರ ಕೊಡಬೇಕು ಎಂದ ಯಡಿಯೂರಪ್ಪ, ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ 54 ಲಕ್ಷ ರೈತರಿಗೆ ಪ್ರಯೋಜನ ಸಿಗುತ್ತಿದೆ. ಭೂಸಿರಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ರೈತ ಶಕ್ತಿ ಯೋಜನೆಯಡಿ ಡೀಸೆಲ್ ಸಬ್ಸಿಡಿ ನೀಡುತ್ತಿದ್ದು, ಕೂಲಿ ಕಾರ್ಮಿಕ ಮಹಿಳೆಯರಿಗೆ 1 ಸಾವಿರ ಕೊಡುವ ಘೋಷಣೆ ಮಾಡಿದ್ದೇವೆ. ಬಿಜೆಪಿ ಗೆಲುವು ಶತಸ್ಸಿದ್ಧ ಎಂದು ತಿಳಿಸಿದರು.
ರಾಹುಲ್ ಗಾಂಧಿಯವರು ಹೊರದೇಶಕ್ಕೆ ಹೋಗಿ ಭಾರತದ ಬಗ್ಗೆ ಹಗುರವಾಗಿ ಮಾತನಾಡುವುದು ಇದು ಮೊದಲಲ್ಲ. ಇದು ಶೋಭೆ ತರುವ ವಿಚಾರವಲ್ಲ. ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ರಾವ್ ಮುಳೆÉ, ಕಲಬುರಗಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮುಖಂಡರಾದ ಸುಭಾμï ಗುತ್ತೇದಾರ್, ಸುನೀಲ್ ವಲ್ಯಾಪುರೆ, ಕಲಬುರಗಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಬಳಿಕ ವಿವಿಧೆಡೆ ರೋಡ್ ಷೋ ನಡೆಯಿತು.