ನವ ದೆಹಲಿ: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prahlad Joshi) ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದ ಕೆಲವು ಪ್ರಮುಖ ಶಾಸಕರು ಭಾಗಿಯಾಗಿದ್ದರು. ಈ ವೇಳೆ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರವನ್ನು ಗೆಲ್ಲುವ ವಿಶ್ವಾಸವನ್ನು ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ನವ ದೆಹಲಿಯ ಗೃಹ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಭಾಗ್ಯ ಬಹುಪಾಲು ಜನರನ್ನು ತಲುಪಿಯೇ ಇಲ್ಲ. ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಜನಸ್ಪಂದನ ನಡೆಸಿದ್ದು ಆಡಳಿತ ಯಂತ್ರ ಕುಸಿತಕ್ಕೆ ನಿದರ್ಶನವಾಗಿದೆ. ಈ ಬಗ್ಗೆ ಜನರಿಗೆ ಮನದಟ್ಟು ಮಾಡುವುದು ಸೇರಿದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂದು ಜೋಶಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಸಂಸದರಾದ ಪಿ.ಸಿ.ಗದ್ದಿಗೌಡ್ರು, ಪಿ.ಸಿ.ಮೋಹನ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ನನ್ನ ಕಾರ್ಯವೈಖರಿ ಬಗ್ಗೆ ನಡ್ಡಾ ಮೆಚ್ಚುಗೆ: ವಿಜಯೇಂದ್ರ
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಧಾ ಮೋಹನ್ ಸಿಂಗ್ ನಮ್ಮ ರಾಜ್ಯದ ಉಸ್ತುವಾರಿಯಾಗಿದ್ದಾರೆ. ಅವರ ಜತೆ ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚೆ ನಡೆದಿದೆ. ಪೂರ್ವ ತಯಾರಿ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದೇನೆ. ಮುಂಬರುವ ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ನಡ್ಡಾ ಅವರು ನನ್ನ ಕಾರ್ಯವೈಖರಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ದಾಖಲೆ ಬರೆಯಲಿದೆ ಎಂದು ಭರವಸೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ರಾಜ್ಯಸಭೆ ಟಿಕೆಟ್ ನೀಡುವ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ಎಲ್ಲವೂ ಚರ್ಚೆಯಾಗಿದೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ವೇಳೆ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಇದ್ದರು. ಇದಕ್ಕೆ ವಿಶೇಷ ಒತ್ತು ಕೊಡುವ ಅಗತ್ಯ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು.
ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ನಾಡಿದ್ದು ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಈ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದರು.
ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲ
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಪಕ್ಷ ವೈಫಲ್ಯ ಮುಚ್ಚಿಕೊಳ್ಳಲು ಈ ಆರೋಪವನ್ನು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಲೋಪದೋಷ ಮುಚ್ಚಿ ಹಾಕಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಸಿಎಂ ಸ್ಥಾನಕ್ಕೆ ಗೌರವ ತರುವುದಲ್ಲ. ದೆಹಲಿಯಲ್ಲಿ ಕರ್ನಾಟಕದ ಮರ್ಯಾದೆಯನ್ನು ತೆಗೆಯುವ ಪ್ರಯತ್ನ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಹತಾಶೆಗೊಂಡಿದ್ದಾರೆ. ಅದಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಈ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಹೇಳಿದರು.
ಕಾಂಗ್ರೆಸ್‌ನಿಂದ ಅರ್ಧ ಸತ್ಯ
ಹಣಕಾಸು ಸಚಿವವರಾದ ನಿರ್ಮಲಾ ಸೀತಾರಾಮನ್ ಅವರು, ಕಾಂಗ್ರೆಸ್ ಪಕ್ಷದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಕಳೆದ ಎರಡು ಅವಧಿಯಲ್ಲಿ ಎಷ್ಟು ಅನುದಾನ ನೀಡಿದ್ದಾರೆ? ರಾಜ್ಯಕ್ಕೆ ಕೇಂದ್ರ ಬಿಜೆಪಿಯಿಂದ ಯಾವುದೇ ಅನ್ಯಾಯ ಆಗಿಲ್ಲ. ದೇಶದ ಎಲ್ಲ ರಾಜ್ಯಗಳಿಗೂ ವಿಶೇಷ ಅನುದಾನ ನೀಡುವುದನ್ನು ನಿಲ್ಲಿಸಲಾಗಿದೆ. ವಿಶೇಷ ಅನುದಾನ ಐದು ವರ್ಷಕ್ಕೆ ಸೀಮಿತವಾಗಿತ್ತು. ಅರ್ಧ ಸತ್ಯವನ್ನು ಹೇಳುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಅಸತ್ಯ ನುಡಿದು ರಾಜ್ಯದ ಗೌರವ ಹಾಳು ಮಾಡುತ್ತಿದ್ದಾರೆ. ಕೇಂದ್ರದ ಜತೆಗಿನ ಸಂಬಂಧ ಹಾಳು ಮಾಡುತ್ತಿದ್ದಾರೆ. ಸಿಎಂ ಆರೂವರೆ ಕೋಟಿ ಜನರ ಪ್ರತಿನಿಧಿಯಾಗಿದ್ದಾರೆ ಅದನ್ನು ಅವರು ಮರೆಯಬಾರದು ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಕಾಂಗ್ರೆಸ್‌ನವರಿಗೆ ಅಸ್ತಿತ್ವ ಇಲ್ಲ. ಅದಕ್ಕಾಗಿ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಜನರ ಕಣ್ಣಿಗೆ ಮಣ್ಣು ಎರಚುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಬಾರಿ ಅಪಪ್ರಚಾರಕ್ಕೆ ನಾವು ಸೋತಿದ್ದೇವೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.ʼ
ಕರ್ನಾಟಕದಲ್ಲಿ ನಾವು 28 ಸ್ಥಾನಗಳನ್ನು ಗೆಲ್ಲಲಿದ್ದೇವೆ
ಸರ್ವೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎನ್ನುವುದು ಜನರ ಅಭಿಪ್ರಾಯ. ಕರ್ನಾಟಕದಲ್ಲಿ ನಾವು 28 ಸ್ಥಾನಗಳನ್ನು ಗೆಲ್ಲಲಿದ್ದೇವೆ. ಹೊಸ ದಾಖಲೆಯನ್ನು ನಿರ್ಮಾಣ ಮಾಡಲಿದ್ದೇವೆ. ಇದು ಉತ್ಪ್ರೇಕ್ಷೆ ಎನಿಸಬಹುದು. ಆದರೂ ಅದು ಸತ್ಯ ಎಂದು ಹೇಳಿದರು.