Site icon Vistara News

Yathindra Siddaramaih : ಯತೀಂದ್ರ ವರ್ಗಾವಣೆ ದಂಧೆಗೆ ಸಾಕ್ಷಿ; ಸಿಎಂ ರಾಜೀನಾಮೆಗೆ HDK ಆಗ್ರಹ

Yathindra Siddaramaiah Case Siddaramaiah HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM siddaramaiah) ಅವರ ಸರ್ಕಾರದಲ್ಲಿ ಮಗ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪ ಬಹಳವಾಗಿದೆ ಎಂಬ ಆರೋಪಕ್ಕೆ ಪೂರಕವಾಗಿ ವಿಡಿಯೊ ಸಾಕ್ಷಿಯೊಂದು ಲಭ್ಯವಾಗಿದೆ. ಇದರ ಬೆನ್ನಿಗೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ತಾನು ಮಾಡುತ್ತಿರುವ ಆರೋಪಗಳಿಗೆ ಸಾಕ್ಷಿ ಸಿಕ್ಕಿತಲ್ವೇ ಎಂದು ಸಾಮಾಜಿಕ ಜಾಲ ತಾಣ Xನಲ್ಲಿ ಕುಟುಕಿದ್ದಾರೆ. ಕಾಂಗ್ರೆಸ್ಸರಕಾರದಲ್ಲಿಕಾಸಿಗಾಗಿ_ಹುದ್ದೆ/ CashForPosting ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿದ್ದ ವೇಳೆ ಸಿದ್ದರಾಮಯ್ಯ ಅವರಿಂದ ಬಂದ ಫೋನ್‌ ಕರೆಗೆ ಉತ್ತರಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಮುಂದೆಯೇ ತಾನು ನೀಡಿದ ಲಿಸ್ಟ್ ಬಗ್ಗೆ ಅವರು ತಂದೆಯ ಜತೆ ಮಾತುಕತೆ ನಡೆಸಿದ್ದರು. ಫೋನ್‌ ಮಾಡಿ ಮಾತನಾಡಿದ ಯತೀಂದ್ರ, ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ‌ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸಿದ್ದರು. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ʼಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದುʼ ಅಂತ ಪ್ರಶ್ನೆ ಮಾಡಿದ್ದಾರೆ. ʼಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿʼ ಅಂತ ಯತೀಂದ್ರ ಅವರು ಮಹದೇವರಿಗೆ ಸೂಚಿಸಿದ್ದಾರೆ.

ಈ ವಿಡಿಯೋ ಈಗ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗುವ ಸಾಧ್ಯತೆ ಕಂಡುಬಂದಿದೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುನ್ನುಡಿ ಬರೆದಿದ್ದಾರೆ.

ಈಗ ಬಯಲಾಯಿತು ಅಸಲಿ ಮುಖ

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಎಚ್.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: CM siddaramaiah: ನನ್ನ ಲಿಸ್ಟೇ ಆಗಬೇಕು!‌ ಜನರ ಎದುರೇ ತಂದೆಗೆ ಫೋನ್‌ ಮಾಡಿ ಯತೀಂದ್ರ ತಾಕೀತು

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?

ಯತೀಂದ್ರ ಸಿಎಂ ಮಗನೋ? ಸೂಪರ್‌ ಸಿಎಮ್ಮೋ

ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, “ನಾನು ಹೇಳಿದವರಷ್ಟನ್ನೇ ಮಾಡಿ” ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ?

ಸಿದ್ದರಾಮಯ್ಯ ಈಗ ಏನು ಹೇಳುತ್ತಾರೆ?

ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?

ಎಷ್ಟು ಹುದ್ದೆ ಮಾರಿದ್ದೀರಿ? ನಿಮಗೆಷ್ಟು? ನಿಮ್ಮ ಮಗನಿಗೆಷ್ಟು?

ಈಗ ಹೇಳಿ @siddaramaiah ನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?

ಸತ್ಯ ಈಗ ಎದುರಿಗೆ ಎದ್ದು ಕೂತಿದೆ.. ಸುಲಿಗೆ ಪುತ್ರ ವ್ಯವಹಾರ ಬಯಲಾಗಿದೆ

ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು.

ಸಿದ್ದರಾಮಯ್ಯ ರಾಜೀನಾಮೆಗೆ ಎಚ್.ಡಿ ಕುಮಾರಸ್ವಾಮಿ ಆಗ್ರಹ

ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ.

Exit mobile version