Site icon Vistara News

Cauvery water dispute : ದೇವೇಗೌಡರ ನೋಡಿ ಕಲಿಯಲು ಬಿಜೆಪಿಗೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ!

CM Siddaramaiah and HD Devegowda infront of KRS Dam

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಪತ್ರ ಬರೆದಿರುವುದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ವಾಗತಿಸಿದ್ದಾರೆ. ಅಲ್ಲದೆ, ದೇವೇಗೌಡರ ನಡೆಯಂತೆ ಬಿಜೆಪಿಯವರೂ ಈ ವಿಚಾರವಾಗಿ ವರ್ತಿಸಲಿ ಎಂದು ಸಲಹೆ ನೀಡಿದ್ದಾರೆ.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Cauvery water dispute : ನಾಳೆ ಬಂದ್‌ ಯಶಸ್ವಿ ಆಗಬೇಕು; ಹೋಟೆಲ್‌ ಓಪನ್‌ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ

ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಎಚ್.ಡಿ. ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯ ಪ್ರವೇಶಕ್ಕೆ ಒತ್ತಡ ಹೇರಬೇಕು. ಅತಿ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: CM Siddaramaiah : 2ನೇ ಅವಧಿಗೆ ಚಾಮರಾಜನಗರಕ್ಕೆ ಸಿಎಂ ಭೇಟಿ; ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ

ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪೋಸ್ಟ್‌ ಮೂಲಕ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದ್ದಾರೆ.

Exit mobile version