Site icon Vistara News

Basavaraj Bommai : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah meets Basavaraj Bommai in hospital

ಬೆಂಗಳೂರು: ಮಂಡಿ ಶಸ್ತ್ರ ಚಿಕಿತ್ಸೆಗೆ (Knee surgery) ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ್ (Basavaraj Bommai) ಬೊಮ್ಮಾಯಿ ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister Dr G Parameshwara) ಅವರು ಭೇಟಿ ನೀಡಿದ್ದು, ಬಸವರಾಜ್ ಬೊಮ್ಮಾಯಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೆ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ಜತೆಗಿದ್ದರು.

ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ

ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್​ ಆಸ್ಪತ್ರೆಗೆ ದಾಖಲಾಗಿ ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಈ ಹಿಂದೆ ನಾಟಿ ವೈದ್ಯಕ್ಕೆ ಮಾಜಿ ಸಿಎಂ ಬೊಮ್ಮಾಯಿ ಮೊರೆ ಹೋಗಿದ್ದರು. ಆದರೆ, ಅವರ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಅವರು ಈಗ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿಕೊಂಡಿದ್ದಾರೆ.

ಸಿಎಂ ಆಗಿದ್ದ ಸಂದರ್ಭದಲ್ಲಿ ಸಾಕಷ್ಟು ಪ್ರವಾಸ ಮಾಡಿದ್ದರಿಂದ ಬೊಮ್ಮಾಯಿ ಅವರಿಗೆ ಮಂಡಿ ನೋವು ಹೆಚ್ಚಾಗಿತ್ತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಷ್ಟಪಟ್ಟು ನಡೆಯುತ್ತಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದರು. ಆಗ ವಿದೇಶಕ್ಕೆ ತೆರಳಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಅವರು ನಿರ್ಧರಿಸಿದ್ದರು ಎನ್ನಲಾಗಿತ್ತು. ಚುನಾವಣೆ ಸಮಯವಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದಾಗ ಮಾಜಿ ಸಿಎಂಗೆ ಹೃದಯ ಸಂಬಂಧಿತ ಸಮಸ್ಯೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka live news: ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು; ಡಿಕೆ ಬ್ರದರ್ಸ್‌ಗೆ ಗ್ರಾಹಕ ನ್ಯಾಯಾಲಯ ಶಾಕ್

ಆದಷ್ಟು ಬೇಗ ಗುಣಮುಖನಾಗಿ ಬರುವೆ

ಶಸ್ತ್ರಚಿಕಿತ್ಸೆ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರೂ ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ತಿಳಿಸಿದ್ದರು.

Exit mobile version