Site icon Vistara News

CM Siddaramaiah : ಸಿದ್ಧಾಂತ ಒಪ್ಪಿದವರು ಸೇರಬಹುದು ಎಂದ ಸಿಎಂ ಸಿದ್ದರಾಮಯ್ಯ; ಆಪರೇಷನ್‌ ಹಸ್ತಕ್ಕೆ ಗ್ರೀನ್‌ ಸಿಗ್ನಲ್‌?

Siddaramaiah

ಮೈಸೂರು: ನಮ್ಮ ಪಕ್ಷದ ಸಿದ್ಧಾಂತವನ್ನು (Ideology of Congress party) ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಅವರು ಬಿಜೆಪಿಯಿಂದ ಕೆಲವು ನಾಯಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಆಪರೇಷನ್‌ ಹಸ್ತಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾತುಕೇಳಿಬಂದಿದೆ. ಸೋಮವಾರ ಆಯೋಜನೆಗೊಂಡ ಮೈಸೂರು ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ- Karnataka Development programmes) ಸಭೆಯಲ್ಲಿ ಆಗಮಿಸಿದ ಸಿದ್ದರಾಮಯ್ಯ ಅವರು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಯಾದ ಬಳಿಕ ಅವರು ಇದೇ ಮೊದಲ ಬಾರಿಗೆ ಕೆಡಿಪಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸಿಎಂ ಅವರನ್ನು ಸ್ವಾಗತಿಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ತನ್ವೀರ್ ಸೇಠ್, ಟಿ.ಎಸ್.ಶ್ರೀವತ್ಸ, ಹರೀಶ್‌‌ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಕೆ.ಹರೀಶ್‌ಗೌಡ, ಡಿ.ರವಿಶಂಕರ್, ಸಿ.ಎನ್.ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಅಡಗೂರು ಎಚ್‌.ವಿಶ್ವನಾಥ್, ಮರಿತಿಬ್ಬೇಗೌಡ, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಸ್ವಾಗತಕ್ಕೆ ಬರುವುದು ಬೇಡ ಎಂದು ಮೋದಿಯೇ ಹೇಳಿದ್ದರು.

ಕೆಡಿಪಿ ಸಭೆಗೆ ಮೊದಲು ಮಾತನಾಡಿದ ಸಿದ್ದರಾಮಯ್ಯ ಅವರು ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.

ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ

ಪ್ರಧಾನಿ ಮೋದಿ ಅವರು ತಮ್ಮ ಪಕ್ಷದ ನಾಯಕರನ್ನೂ ಕಡೆಗಣಿಸಿದ್ದಾರೆ ಎಂಬ ಆರೋಪಗಳ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಸಿದ್ದರಾಮಯ್ಯ ಅವರು, ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲಿಲ್ಲ ಎಂದರು.

ನಾಲ್ಕನೇ ಗ್ಯಾರಂಟಿ ಬುಧವಾರ ಉದ್ಘಾಟನೆ

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಆಗಸ್ಟ್‌ 30ರಂದು ಅನುಷ್ಠಾ‌ನಗೊಳ್ಳಲಿದೆ. ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನಿಯರು ಇದರ ಫಲಾನುಭವಿಗಳಾಗಿದ್ದು, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ ಅವರು, ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ನುಡಿದರು.

ಇದನ್ನೂ ಓದಿ : CM Siddaramaiah : ಕಾಂಗ್ರೆಸ್‌ ಸರ್ಕಾರಕ್ಕಿಂದು 100 ದಿನ; ಗ್ಯಾರಂಟಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಯಾವುದೇ ಕಂಡಿಷನ್‌ ಇಲ್ಲದೆ ಸೇರುತ್ತಿದ್ದಾರೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ಚಾಮರಾಜನಗರ: ʻʻಯಾರು ಯಾರಿಗೆ ನಮ್ಮ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತದ ಮೇಲೆ ನಂಬಿಕೆ ಇದೆಯೋ ವಿಶ್ವಾಸ ಇದೆಯೋ ಅಂತವರು ಬರ್ತಾರೆ. ಜನಪರ ಕಾರ್ಯಕ್ರಮ ಕೊಡ್ತಾ ಇರೋ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ. ಯಾವುದೇ ಕಂಡಿಷನ್ ಇಲ್ಲದೆ ಸೇರುತ್ತಿದ್ದಾರೆʼʼ ಎಂದು ಚಾಮರಾಜನಗರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Exit mobile version