Site icon Vistara News

CM Siddaramaiah: ಯತೀಂದ್ರ ಸಿದ್ದರಾಮಯ್ಯ ಉದ್ಭವ ಆಗುತ್ತಿರುವ ನಾಯಕ; ಡಿ.ಕೆ. ಶಿವಕುಮಾರ್‌ ವ್ಯಂಗ್ಯ

DK Shivakumar

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಸೂಕ್ಷ್ಮ ವ್ಯಕ್ತಿಯಾಗಿದ್ದಾರೆ. ಅವರು ಈಗ ಉದ್ಭವ ಆಗುತ್ತಿರುವ ನಾಯಕ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ (Parliamentary Elections 2024) ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ (CM Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ (siddaramaiah Full time Chief Minister) ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ (Yatindra siddaramaiah) ಹೇಳಿಕೆಗೆ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಯತೀಂದ್ರ ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಮಾತನ್ನು ತಿರುಚುವ ಅಗತ್ಯವಿಲ್ಲ ಎಂದು ಹೇಳಿದರು.

ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ

“ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಬಿಜೆಪಿಯವರು ತಮ್ಮದನ್ನು ಸರಿ ಮಾಡಿಕೊಳ್ಳಲಿ

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್‌ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಅವರ ಪಕ್ಷದ ವಿಚಾರವನ್ನು ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್‌ ನಕಲಿ ಸೋಪು; ಕಾನೂನು ಕ್ರಮ

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, “ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ. ಈ ಹಿಂದೆ ಮೈಸೂರು ಲ್ಯಾಂಪ್ಸ್‌ ಅನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ 300 ಕೋಟಿ ಮೌಲ್ಯದ ರೈಲ್ವೇ ಭೂಮಿಯನ್ನು ಕೇವಲ 80 ಕೋಟಿಗೆ ಬಿಡ್ ಕರೆಯಲು ಮುಂದಾಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡದ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ನಾನು ಮಾತನಾಡುವುದಿಲ್ಲ. ಅನಗತ್ಯವಾಗಿ ಮಾತನಾಡುವುದಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ‌! 10 ಲೋಕಸಭಾ ಕ್ಷೇತ್ರದಲ್ಲಿ ಡ್ಯಾಮೇಜ್‌ ಮಾಡೀತೇ ಯತೀಂದ್ರ ಹೇಳಿಕೆ?

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೇಳಿದಾಗ ನಿಮ್ಮ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.

Exit mobile version