ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನಾಯಕರು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಬಿಜೆಪಿಯ ಸ್ಥಳೀಯ ಶಾಸಕರು ಚಲಾಯಿಸಿರುವ ಎಲ್ಲ ೧೨೨ ಮತಗಳನ್ನು ಅಸಿಂಧುಗೊಳಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಿದ್ದಾರೆ.
ದೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮುಖ್ಯ ಸಚೇತಕ ಸತೀಶ್ ರೆಡ್ಡಿ ಅವರನ್ನು ಹೆಸರಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ. ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಎಚ್‌ಎಂ ರೇವಣ್ಣ ಮೊದಲಾದವರು ನಿಯೋಗದಲ್ಲಿದ್ದರು.
ದೂರಿನಲ್ಲಿ ಏನಿದೆ? ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಸಮ್ಮತಿಯೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಇತರ ಬಿಜೆಪಿ ನಾಯಕರು, ಪಕ್ಷದ ಶಾಸಕರಿಗೆ ಪಂಚತಾರಾ ಹೋಟೆಲ್‌ನಲ್ಲಿ ಆತಿಥ್ಯ ನೀಡಿದ್ದಾರೆ. ಐಷಾರಾಮಿ ಕೊಠಡಿಗಳಲ್ಲಿ ಆಹಾರ, ಮದ್ಯ, ಪಾನೀಯಗಳನ್ನು ಸರಬರಾಜು ಮಾಡಿದ್ದಾರೆ. ಮನರಂಜನೆ ನೀಡಿದ್ದಾರೆ. ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ತರಬೇತಿ ನೀಡುವ ನೆಪದಲ್ಲಿ ಇದೆಲ್ಲ ನಡೆದಿದೆ. ಚುನಾವಣೆಗೆ ಎರಡು ದಿನ ಇರುವಾಗ ಪಕ್ಷದ ಶಾಸಕರನ್ನು ಹೋಟೆಲ್‌ಗೆ ಕರೆಸಿಕೊಳ್ಳಲಾಗಿದೆ. ಹಾಗೂ ದ್ರೌಪದಿ ಮುರ್ಮು ಅವರಿಗೆ ಮತ ಹಾಕುವಂತೆ ಪ್ರಭಾವ ಬೀರಲಾಗಿದೆ. ಇದು ಚುನಾವಣಾ ನೀತಿ ಸಂಹಿತೆ ಮತ್ತು ಪ್ರಜಾ ಪ್ರತಿನಿಧಿ ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ದೂರಿದೆ. ಹೀಗಾಗಿ ಈ ಎಲ್ಲ ಶಾಸಕರ ಮತಗಳನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ದೂರನ್ನು ಸ್ವೀಕರಿಸಿದ್ದು, ಆಯೋಗದ ಮುಖ್ಯಸ್ಥರಿಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.