Site icon Vistara News

HD Kumaraswamy : ಎಚ್‌ಡಿಕೆಯಿಂದ ವಿದ್ಯುತ್‌ ಕಳ್ಳತನವೆಂದ ಕಾಂಗ್ರೆಸ್‌; ದಂಡ ಕಟ್ತೇನೆ ಅಂದ್ರು ಕುಮಾರಸ್ವಾಮಿ

HD Kumaraswamy hosue with Decoration of electric lights

ಬೆಂಗಳೂರು: ದೀಪಾವಳಿ ಹಬ್ಬದ (Diwali Festival) ಪ್ರಯುಕ್ತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರ (Decoration of electric lights) ಮಾಡಲಾಗಿತ್ತು. ಆದರೆ, ಇದಕ್ಕೆ ನೇರವಾಗಿ ವಿದ್ಯುತ್‌ ಕಂಬದಿಂದ ಸಂಪರ್ಕ (Connection from electric pole) ಪಡೆದಿರುವುದು ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ. ಈ ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಯ ಮೀಟರ್‌ ಬೋರ್ಡ್‌ (Electricity meter board) ಸಂಪರ್ಕವನ್ನು ಪಡೆದರಾದರೂ ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದು ಹೀಗಳೆದಿದೆ. ಅದರೆ, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ. ಕುಮಾರಸ್ವಾಮಿ, ಇದು ಖಾಸಗಿ ಡೆಕೋರೇಟರ್ ಮಾಡಿದ ಅಚಾತುರ್ಯವಾಗಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಿಎಂಗೆ ವಿದ್ಯುತ್‌ ಕಳ್ಳತನದ ದಾರಿದ್ರ್ಯ ಎಂದ ಕಾಂಗ್ರೆಸ್‌!

ಎಚ್‌.ಡಿ. ಕುಮಾರಸ್ವಾಮಿ ಮನೆಯ ವಿದ್ಯುತ್‌ ದೀಪಾಲಂಕಾರಕ್ಕೆ ಲೈನ್‌ ಕಂಬದಿಂದ ಸಂಪರ್ಕ ಪಡೆದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತಿದ್ದಂತೆ ಅದರ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಕುಟುಕಿದೆ.

ಇದನ್ನೂ ಓದಿ: Karnataka weather : ಚಳಿ ಚಳಿ ತಾಳೆನು ಈ ಚಳಿಯಾ ಎಂದ ಬೆಂಗಳೂರಿಗರು; ಇಂದಿನಿಂದ ಮತ್ತೆ ಮಳೆ!

ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?

“ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್.ಡಿ. ಕುಮಾರಸ್ವಾಮಿಯವರ ಜೆ.ಪಿ. ನಗರದ ನಿವಾಸದಲ್ಲಿ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!

ಎಚ್.ಡಿ. ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹ ಜ್ಯೋತಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್‌ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ!

ಕಾಂಗ್ರೆಸ್‌ ಮಾಡಿದ ಆರೋಪ ಏನು? ಇಲ್ಲಿದೆ ವಿಡಿಯೊ

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ?

ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿದೆ.

ತಿಳಿದು ಮಾತನಾಡುವೆ ಎಂದ ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ವಿದ್ಯುತ್ ಕದ್ದಿರುವ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕರೆಂಟ್ ಕದ್ದಿರುವ ಬಗ್ಗೆ ನನಗೆ ಗೊತ್ತಿಲ್ಲ‌. ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

ಇಂಧನ ಇಲಾಖೆಯವರು ಕ್ರಮ ತಗೊಳ್ತಾರೆ ಎಂದ ಡಿಕೆಶಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮಾಧ್ಯಮಗಳಲ್ಲಿ ನೋಡಿ ನಾನು ವಿದ್ಯುತ್‌ ಕಳ್ಳತನದ ಬಗ್ಗೆ ತಿಳಿದುಕೊಂಡೆ. ನಮ್ಮ ಪಕ್ಷದವರು ಅದನ್ನು ನೋಡಿ ಟ್ವೀಟ್‌ ಮಾಡಿದ್ದಾರೆ. ಕೆಇಬಿಯವರು ಕ್ರಮವನ್ನು ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನನಗೆ ಗೊತ್ತಿಲ್ಲ. ವಿದ್ಯುತ್ ಕಳ್ಳತನ ಮಾಡಬಾರದು. ನಮ್ಮಂತವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾಡಿದರೆ ತಪ್ಪು ಅಲ್ಲವೇ? ಇಲಾಖೆಯವರು, ಸಚಿವ ಕೆ.ಜೆ. ಜಾರ್ಜ್‌ ಅವರು ಇದ್ದಾರೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರಿಗೆ ಬಿಟ್ಟ ವಿಷಯವಾಗಿದೆ.

ಡೆಕೋರೇಟರ್‌ ಮಾಡಿದ ಅಚಾತುರ್ಯ, ದಂಡ ಕಟ್ಟುವೆ: ಎಚ್‌.ಡಿ. ಕುಮಾರಸ್ವಾಮಿ

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಮೂಲಕ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದು, ದಂಡ ಕಟ್ಟಲು ತಾವು ಸಿದ್ಧರಿರುವುದಾಗಿ ಹೇಳಿದ್ದಾರೆ.

ಎಚ್‌ಡಿಕೆ ಪೋಸ್ಟ್‌ನಲ್ಲೇನಿದೆ?

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ” ಎಂದು ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.

Exit mobile version