Site icon Vistara News

Congress Guarantee Scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah on Congress Guarantee Scheme

ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು (Congress Guarantee Scheme) ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಹೇಳಿಕೆಯನ್ನು ನಿರಾಕರಿಸಿದರು. ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಬಾಲಕೃಷ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆಯನ್ನು ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಯನ್ನು ಪರಿಶೀಲನೆ ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ

ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್‌ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ, ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್‌ ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲ; ಕಾಂಗ್ರೆಸ್‌ ವಿರುದ್ಧ ಪ್ರಲ್ಹಾದ್‌ ಜೋಶಿ ಕಿಡಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ (MLA Balakrishna) ಹೇಳಿಕೆಗೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ಇನ್ನಿತರ ನಾಯಕರು ಕಾಂಗ್ರೆಸ್‌ ಸರ್ಕಾರದ (Congress Government) ವಿರುದ್ಧ ಹರಿಹಾಯ್ದಿದ್ದಾರೆ. ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ‌ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ‌ಆಕ್ರೋಶವನ್ನು ಹೊರಹಾಕಿದ್ದಾರೆ.

ಪ್ರಲ್ಹಾದ್‌ ಜೋಶಿ ಪೋಸ್ಟ್‌ನಲ್ಲೇನಿದೆ?

“ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

2023ರ ವಿಧಾನಸಭಾ ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿ ಮತದಾರರನ್ನು ಸೆಳೆದಿದ್ದ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ದರೆ ಗ್ಯಾರಂಟಿಗಳನ್ನು ರದ್ದುಪಡಿಸುವ ಬೆದರಿಕೆವೊಡ್ಡಿ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ನೋಡುತ್ತಿದೆ.

ಕರ್ನಾಟಕದಲ್ಲಿ ಗ್ಯಾರಂಟಿಗಳನ್ನೇ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ಗೆ ಇದೀಗ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಲೋಕಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ಶಾಸಕರು ಗ್ಯಾರಂಟಿಗಳನ್ನು ರದ್ದುಪಡಿಸುವ ಮಾತನಾಡುತ್ತಿದ್ದಾರೆ.

ಆಶ್ವಾಸನೆ ನೀಡಿದಂತೆ ಇನ್ನೂ ಸರಿಯಾಗಿ ಗ್ಯಾರಂಟಿಗಳನ್ನು ಎಲ್ಲರಿಗೂ ಪೂರೈಸಿಯೇ ಇಲ್ಲ. ಅದಾಗಲೇ ಮತದಾರರ ಮೇಲೆ ಗ್ಯಾರಂಟಿ ರದ್ದುಪಡಿಸುವ ಹೊಸ ಬೆದರಿಕೆ ತಂತ್ರ ಹೇರುತ್ತಿದೆ. ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡದೇ ಇದ್ದರೆ ಎಲ್ಲ ಗ್ಯಾರಂಟಿ ಭಾಗ್ಯಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೊಂಡಿರುವುದನ್ನ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: Guarantee Scheme: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 50 ಸಾವಿರ ರೂ. ಕೊಡಲೂ ಸರ್ಕಾರದಲ್ಲಿ ಹಣವಿಲ್ಲ?

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ತನ್ನ ಚುನಾವಣಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿ ಮುಂದಿನ ಚುನಾವಣೆಯಲ್ಲಿ ಜನತೆ ಕೈಗೆ “ಕೈ” ಕೊಡಲಿದ್ದಾರೆ” ಎಂದು ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.

Exit mobile version