Site icon Vistara News

Congress Karnataka: ಲೋಕಸಭೆಗೆ ಕಾಂಗ್ರೆಸ್‌ ರಣತಂತ್ರ; ಜಿಲ್ಲಾಧ್ಯಕ್ಷರಿಗೆ ಸಿಎಂ, ಡಿಸಿಎಂ, ಸುರ್ಜೇವಾಲ ಪಾಠ

Congress Karnataka strategy meeting

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್‌ (Congress Karnataka) ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಅನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದು, ಈ ಹಿನ್ನೆಲೆಯಲ್ಲಿ ರಣತಂತ್ರವನ್ನು ಹೆಣೆಯಲಾಗುತ್ತಿದೆ. ಗ್ಯಾರಂಟಿ ಯೋಜನೆಯ (Congress Guarantee Scheme) ಅನುಷ್ಠಾನವನ್ನು ಪ್ರಧಾನವಾಗಿಟ್ಟುಕೊಂಡು, ಇನ್ನಿತರ ಅಂಶಗಳಿಂದ ಜನರನ್ನು ಸೆಳೆಯಲು ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ. ಇನ್ನು ರಾಜ್ಯ ಕಾಂಗ್ರೆಸ್‌ನಲ್ಲಾಗುತ್ತಿರುವ ಅನೇಕ ಬೆಳವಣಿಗೆಗಳು, ಅಸಮಾಧಾನಗಳು, ಮೂರು ಡಿಸಿಎಂ ಹುದ್ದೆಗಳ ಚರ್ಚೆ ಬಗ್ಗೆಯೂ ಇಲ್ಲಿ ಸ್ಪಷ್ಟ ಸಂದೇಶವನ್ನು ರವಾನೆ ಮಾಡಲು ಮುಂದಾಗಲಾಗಿದೆ ಎಂದು ಹೇಳಲಾಗಿದೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯನ್ನು ಆಯೋಜಿಸಲಾಗಿತ್ತು. ಇಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ನೇತೃತ್ವದಲ್ಲಿ ಸಭೆ ನಡೆದಿದ್ದು, ಕೆಲವೊಂದು ವಿಚಾರಗಳ ಬಗ್ಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರದಲ್ಲಿ ಮೂವರು ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪವನ್ನೂ ಮಾಡದೆ ಅದನ್ನು ನಿರ್ಲಕ್ಷಿಸುವ ಮೂಲಕ ಅಸಮಾಧಾನಿತ ಸಚಿವರಿಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಲಾಗಿದೆ.

ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಅವರ ಜವಾಬ್ದಾರಿಗಳ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಶಕ್ತಿ ಮೀರಿ ಪ್ರಯತ್ನ ಮಾಡಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಲಾಯಿತು. ಅಲ್ಲದೆ, ಯಾವುದೇ ಒಳಜಗಳಕ್ಕೆ ಅವಕಾಶ ಕೊಡಬಾರದು. ಒಂದು ವೇಳೆ ಪಕ್ಷಕ್ಕೆ ಮುಜುಗರ ತರುವ ಪರಿಸ್ಥಿತಿ ತಂದುಕೊಂಡರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಇದೇ ವೇಳೆ ನೀಡಲಾಗಿದೆ ಎನ್ನಲಾಗಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ

ಕರ್ನಾಟಕ ಕಾಂಗ್ರೆಸ್‌ ಸರ್ಕಾರ (Congress Government) ರಾಜ್ಯದಲ್ಲಿ ಜಾರಿಗೆ ತಂದಿರುವ 5 ಪ್ರಮುಖ ಗ್ಯಾರಂಟಿ ಯೋಜನೆಗಳ (Congress Guarantee Scheme) ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಹತ್ವದ ಘೋಷಣೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ (Implementation Committee of Guarantee Schemes) ರಚನೆ ಮಾಡುವುದಾಗಿ ಹೇಳಿದ್ದು, ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ (Cabinet Rank Status) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಮಹತ್ವದ ಘೋಷಣೆ ಘೋಷಣೆಯನ್ನು ಮಾಡಿದರು. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡುವುದಾಗಿ ಘೋಷಣೆ ಮಾಡಿದರು.

ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಇನ್ನು ಇದಕ್ಕೆ ರಾಜ್ಯ ಮಟ್ಟದ ಸಮಿತಿಯನ್ನು ನೇಮಕ ಮಾಡಲಿದ್ದು, ಆ ಸಮಿತಿಯ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವುದಾಗಿ ಹೇಳಿದ್ದಾರೆ. ಉಳಿದ ಸಮಿತಿ ಅಧ್ಯಕ್ಷ – ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಾರ್ಷಿಕ 16 ಕೋಟಿ ರೂ. ವೆಚ್ಚ

ಈ ಅನುಷ್ಠಾನ ಸಮಿತಿ ನಿರ್ವಹಣೆಗೆ ವಾರ್ಷಿಕವಾಗಿ 16 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಲೆಕ್ಕಾಚಾರ?

ಈಗ ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಂಡಿರುವ ನಿರ್ಧಾರದ ಹಿಂದೆ ಲೋಕಸಭಾ ಚುನಾವಣೆ ಲೆಕ್ಕಾಚಾರಗಳು ಅಡಗಿವೆ ಎಂದು ಹೇಳಲಾಗುತ್ತಿದೆ. ಕಾರಣ, ಗ್ಯಾರಂಟಿ ಯೋಜನೆಗಳು ಎಷ್ಟರ ಮಟ್ಟಿಗೆ ರಾಜ್ಯದಲ್ಲಿ ಜಾರಿ ಆಗಿದೆ? ಯಾರಿಗೆಲ್ಲ ಈ ಯೋಜನೆ ತಲುಪಿಲ್ಲ? ಜನರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾವ ಅಭಿಪ್ರಾಯ ಇದೆ? ಎಂಬೆಲ್ಲ ಮಾಹಿತಿಗಳನ್ನು ಈ ಸಮಿತಿ ಕಲೆ ಹಾಕಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಯಾವ ರೀತಿ ತಂತ್ರಗಾರಿಕೆಯನ್ನು ಹೆಣೆಯಬೇಕು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅತೃಪ್ತಿ ಶಮನಕ್ಕೂ ಸಿಎಂ ಸಿದ್ದರಾಮಯ್ಯ ಮದ್ದು!

ಇದರ ಜತೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಜತೆಗೆ ಸಚಿವ ಸಂಪುಟ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಅನೇಕ ಹಿರಿಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಇದರಿಂದ ಕೆಲವರು ಗರಂ ಆಗಿ ಪಕ್ಷದ ವಿರುದ್ಧವೇ ಹರಿಹಾಯುತ್ತಿದ್ದಾರೆ. ಅಲ್ಲದೆ, ತಮ್ಮದೇ ಲೆಕ್ಕಾಚಾರಗಳಲ್ಲಿ ದಾಳ ಉರುಳಿಸುತ್ತಿದ್ದಾರೆ. ಇನ್ನು ನಿಗಮ – ಮಂಡಳಿಗಳ ನೇಮಕ ವಿಷಯದಲ್ಲಿಯೂ ಸಹ ಅನೇಕ ಗೊಂದಲಗಳು ಏರ್ಪಟ್ಟಿವೆ. ಮೊದಲಿಗೆ ಶಾಸಕರಿಗೆ ಮಾತ್ರ ಸ್ಥಾನ ಎಂದು ಹೇಳಲಾಗುತ್ತಿತ್ತು. ಆದರೆ, ಬಳಿಕ ಕಾರ್ಯಕರ್ತರಿಗೂ ಅವಕಾಶ ಕೊಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಮುಂದಕ್ಕೆ ಹೋಗುತ್ತಲೇ ಇದೆ.

ಇದನ್ನೂ ಓದಿ: Lok Sabha Election 2024: ಎಐಸಿಸಿ ಪಟ್ಟಿಯನ್ನೇ ಬದಲಾಯಿಸಿದ ಡಿಕೆಶಿ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸ್ಥಾನ!

ಈ ಎಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಆರ್ಥಿಕ ಸಲೆಹಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಬಿ.ಆರ್. ಪಾಟೀಲ್‌ ಅವರನ್ನು ಆರ್ಥಿಕ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಸಚಿವ ಸಂಪುಟ ಸ್ಥಾನಮಾನವನ್ನೂ ನೀಡಿದ್ದಾರೆ. ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚನೆ ಮಾಡುತ್ತಿದ್ದು, ಇದರ ರಾಜ್ಯ ಸಮಿತಿಯ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಅತೃಪ್ತರ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

Exit mobile version