ಬೆಂಗಳೂರು/ಹುಬ್ಬಳ್ಳಿ: ದೆಹಲಿಯಲ್ಲಿ ಮಂಗಳವಾರ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ (Delhi Farmers Protest) ಪಾಲ್ಗೊಳ್ಳಲು ಹೋಗುತ್ತಿದ್ದ ಚಾಮರಾಜನಗರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಕಡೆಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲಿನ ಸರ್ಕಾರದ ಕ್ರಮವನ್ನು ರೈತರು, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನವನ್ನು ಹೊರಹಾಕಿದ್ದು, ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ದೆಹಲಿಗೆ ಹೊರಟಿದ್ದ ಕರ್ನಾಟಕದ ಸುಮಾರು 70 ಮಂದಿ ರೈತರನ್ನು ಭೂಪಾಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ 16 ರೈತರು ಸೇರಿ ರಾಜ್ಯದ 70 ಜನರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿಗೆ ಹೊರಟಿದ್ದ ಕರ್ನಾಟಕ ರೈತರು, ಅಲ್ಲಿ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು.
ಮಂಗಳವಾರ ದೆಹಲಿಯ ಜಂಥರ್ ಮಂಥರ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೋಗುವ ಸಂಬಂಧ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈತರು ತೆರಳುತ್ತಿದ್ದರು. ರೈಲು ಮಧ್ಯಪ್ರದೇಶದ ಭೂಪಾಲ್‌ಗೆ ಬರುತ್ತಿದ್ದಂತೆ ಅಲ್ಲಿನ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ರೈತರನ್ನು ಕಲ್ಯಾಣ ಮಂಟಪದಲ್ಲಿ ಕೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಧ್ಯಪ್ರದೇಶ ಪೊಲೀಸರ ವಿರುದ್ಧ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶವನ್ನು ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಖಂಡನೆ
ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ.
ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.
ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ.
ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ.
ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರ ಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು.
ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ. ಜೈ ಕಿಸಾನ್” ಎಂದು ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Karnataka Budget Session 2024: ಕೇಸರಿ ಶಾಲು ಧರಿಸಿ ಬಂದ ಬಿಜೆಪಿ ಶಾಸಕರು; ಎಡವಿದ ಎಸ್.ಟಿ. ಸೋಮಶೇಖರ್
ಸಭೆ ಬಳಿಕ ಹೋರಾಟದ ರೂಪುರೇಷೆ ಘೋಷಣೆ
ನವದೆಹಲಿಯಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕೇಂದ್ರ ಸರ್ಕಾರ ಭರವಸೆಗಳನ್ನು ನೀಡಿ ಒಂದು ವರ್ಷವಾದರೂ ಬೇಡಿಕೆಗಳನ್ನು ಈಡೇರಿಸಿಲ್ಲ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು, ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಾಳಿನ ಪ್ರತಿಭಟನೆಗೂ ಮುನ್ನ ರೈತರನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ. ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ನೂರಕ್ಕೂ ಅಧಿಕ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಲಾಗಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದು, ನನ್ನ ಪತ್ನಿಯೂ ಸೇರಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ. ಇಂದು ಸಂಜೆ ಕೇಂದ್ರ ಸಚಿವರ ಜತೆಗೆ ಸಭೆ ನಡೆಯಲಿದೆ. ಸಭೆ ಬಳಿಕ ಹೋರಾಟದ ರೂಪುರೇಷೆ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.