ಬೆಂಗಳೂರು: ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಬೆಂಗಳೂರಿನವರೆಗೂ ಬರಕೂಡದು. ಬಂದರೆ ನಿಮ್ಮಗಳ ವೈಫಲ್ಯ. ಇದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎರಡನೇ ಅವಧಿ ಸಿಎಂ ಆದ ಬಳಿಕ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ (CM Home office) ಏರ್ಪಡಿಸಲಾಗಿದ್ದ ಮೊದಲ ಜನತಾ ದರ್ಶನ (Janatha Darshan) ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದ ತರುವಾಯ, ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಈ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕೆಲವೊಂದು ಕಿವಿಮಾತು ಸಹಿತ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಮುಂದೆ ಇಂತಹ ಪ್ರಕರಣಗಳು ಮರುಕಳಿಸಿದರೆ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿ ಎಂದು ತಾಕೀತು ಮಾಡಿದ್ದಾರೆ.
ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್!
ಇಂದು ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು.
ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ. ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಇದನ್ನು ಸಹಿಸಲ್ಲ.
ಜನತಾ ಸ್ಪಂದನದಂತಹ ಕಾರ್ಯಕ್ರಮದಲ್ಲಿ ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗುವುದಿಲ್ಲ. ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಳ ಹಂತದ ಅಧಿಕಾರಿಗಳಿಗೆ ಸ್ಪಂದಿಸಿ
- ಇಂದು ಬಂದ ಅರ್ಜಿಗಳಲ್ಲಿ ಬಹುತೇಕವಾಗಿ ಕಂದಾಯ, ಪೊಲೀಸ್ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಬಂದಿವೆ.
- ವಿಶೇಷವಾಗಿ ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. 4000 ತ್ರಿಚಕ್ರ ವಾಹನ ಒದಗಿಸಲಾಗಿದೆ.
- ವಿಶೇಷವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಖಾತೆ, ಪಹಣಿ, ಪೋಡಿ ಮಾಡಲು ನನ್ನ ಬಳಿ ಬರಬೇಕಾ?
- ಜಿಲ್ಲಾಧಿಕಾರಿಗಳು, ತಹಸೀಲ್ದಾರರು, ಉಪ ವಿಭಾಗಾಧಿಕಾರಿಗಳು ಕೆಲಸ ಮಾಡಿದರೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ.
- ಕಟ್ಟುನಿಟ್ಟಿನ ಸೂಚನೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ.
- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೊಲೀಸ್ ಠಾಣೆ, ಹಾಸ್ಟೆಲ್ಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆ ಬಗೆಹರಿಸಬೇಕು.
- ವಿಳಂಬ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಕೂಡಲೇ ಜನರಿಗೆ ಸ್ಪಂದಿಸಲು ಸೂಚಿಸಿದರು. ಕಾನೂನು ರೀತ್ಯ ಮಾಡಲು ಸಾಧ್ಯವಾಗದಿದ್ದರೆ, ಹಿಂಬರಹ ನೀಡಬೇಕು.
- ಇಂದು ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಹದಿನೈದು ದಿನದೊಳಗೆ ಇವುಗಳನ್ನು ವಿಲೇವಾರಿ ಮಾಡಬೇಕು.
- ನಿಯಮಾವಳಿಗಳಡಿ ಅವಕಾಶವಿಲ್ಲದೆ ಇದ್ದರೆ, ಹಿಂಬರಹ ನೀಡಬೇಕು.
- ಕೆಳಹಂತದ ಅಧಿಕಾರಿಗಳಿಗೆ ನೀವು ಕೂಡಲೇ ಸ್ಪಂದಿಸಬೇಕು.
ಮೂರು ತಿಂಗಳಿಗೊಮ್ಮೆ ಜನತಾ ದರ್ಶನ; ನಿಲಕ್ಷ್ಯ ತೋರುವ ಅಧಿಕಾರಿ ವಿರುದ್ಧ ಕ್ರಮ
ಕನಿಷ್ಠ ಮೂರು ತಿಂಗಳಿಗೊಮ್ಮೆ ಜನತಾ ಸ್ಪಂದನ ಕಾರ್ಯಕ್ರಮ ಮಾಡುತ್ತೇನೆ. ಮುಂದಿನ ಬಾರಿ ಹೆಚ್ಚು ಜನ ಬಂದರೆ, ತಳಹಂತದ ಅಧಿಕಾರಿಗಳು ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ಪರಿಗಣಿಸಲಾಗುವುದು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ: Janatha Darshan : ರೈತರ ಸಮಸ್ಯೆಗೆ ಪರಿಹಾರದ ದರ್ಶನ ನೀಡಿದ ಸಿಎಂ ಸಿದ್ದರಾಮಯ್ಯ!
ಇಂದು ಮೂರೂವರೆ ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿ, ಕಾನೂನು ರೀತ್ಯ ಪರಿಹಾರ ನೀಡಬೇಕು. ಸಾಧ್ಯವಾಗದಿದ್ದರೆ ಹಿಂಬರಹ ನೀಡಬೇಕು. ತಳಹಂತದ ಅಧಿಕಾರಿಗಳು ಅರ್ಜಿಯನ್ನು ಇತ್ಯರ್ಥಪಡಿಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಸೂಚಿಸಿದ್ದಾರೆ.