ಬೆಂಗಳೂರು: ಇನ್ನು ಮುಂದೆ ರೈತರ ಪಂಪ್ ಸೆಟ್ಗಳಿಗೆ (Farmers pumpset) ವಿದ್ಯುತ್ ಪಡೆಯಬೇಕಾದರೆ (Power Connection) ಸ್ವಂತ ಖರ್ಚಿನಲ್ಲಿ ಟ್ರಾನ್ಸ್ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದೆ. ಇದೊಂದು ರೈತ ವಿರೋಧಿ (Anti farmer rules) ನಿಲುವಾಗಿದ್ದು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಹಿಂದೆ ಒಂದು ಪಂಪ್ಸೆಟ್ಗೆ ವಿದ್ಯುತ್ ಪಡೆಯಬೇಕಾದರೆ ರೈತರಿಗೆ 24 ಸಾವಿರ ರೂ. ಖರ್ಚಾಗುತ್ತಿದ್ದರೆ ಈಗ ಅದು 2 ಲಕ್ಷ ರೂ.ಗಳಿಗೆ ಏರಲಿದೆ ಎಂದು ಅದು ಹೇಳಿದೆ.
ʻʻಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲಾದ ರೈತರ ಗಾಯದ ಮೇಲೆ ಬರೆ ಎಳೆದಂತಿದೆ. ಅಲ್ಲದೆ, ಇದು ಬಿಸಿ ಕಾವಲಿಯಲ್ಲಿದ್ದ ರೈತರನ್ನು ಸರಕಾರ ಬೆಂಕಿಗೆ ದೂಡಿದಂತಾಗಿದೆʼʼ ಎಂದು ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ಆರೋಪಿಸಿದ್ದಾರೆ.
ʻʻಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್ಸೆಟ್ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆʼʼ ಎಂದು ಅವರು ಎಚ್ಚರಿಸಿದ್ದಾರೆ.
ʻʻಈ ಹಿಂದೆ ಪ್ರತಿ ನೀರಾವರಿ ಪಂಪ್ಸೆಟ್ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೆ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ರೈತರ ಆತಂಕ ಹೆಚ್ಚಾಗಿದ್ದು, ಪರಿಣಾಮವಾಗಿ ರೈತರು ಮುಂದೇನು ಎಂದು ಯೋಚಿಸುವಂತಾಗಿದೆʼʼ ಎಂದು ಕಡಾಡಿ ಹೇಳಿದ್ದಾರೆ.
ʻʻಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೋಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆʼʼ ಎಂದು ಹೇಳಿದರು.
ಕಾಂಗ್ರೆಸ್ ಅವಧಿಯಲ್ಲಿ 200ಕ್ಕೂ ಅಧಿಕ ರೈತರ ಆತ್ಮಹತ್ಯೆ
ʻʻಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಿಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆÀ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ; ಜೊತೆಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೋಗಿದ್ದಾರೆ ಎಂದು ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೈತ ಪರವಾದ ಎಲ್ಲ ಯೋಜನೆಗಳು ಹಣದ ಕೊರತೆಯಿಂದ ರದ್ದು
ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಇದನ್ನೂ ಓದಿ : HD Kumaraswamy : ನೀವೇನು ಮಾಡಿದೀರಿ? ರೈತ ಸಾಂತ್ವನ ಯಾತ್ರೆ ಲೇವಡಿ ಮಾಡಿದ ಸಿಎಂಗೆ HDK ತಿರುಗೇಟು
ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ. ರೈತರ ಕೃಷಿ ಪಂಪಸೆಟ್ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ. ಸರಕಾರವು ತನ್ನ ಈ ಆದೇಶವನ್ನು ಹಿಂಪಡೆಯದಿದ್ದರೆ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ಮಂಡಲಗಳಲ್ಲಿ ನ.10 ರಂದು ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.