ಬೆಂಗಳೂರು: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು. ಅಲ್ಲದೆ, ಗ್ಯಾರಂಟಿ ಯೋಜನೆ ಮೂಲಕ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಈ ಮೂಲಕ ಗಿಫ್ಟ್ ಪಾಲಿಟಿಕ್ಸ್ (Gift Politics) ವಿರುದ್ಧ ಕಿಡಿಕಾರಿದ್ದಾರೆ.
“ವಿಧಾನಸಭಾ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಲು ಸಾವಿರಾರು ಜನರನ್ನು ಸೇರಿಸಿದ್ದಲ್ಲದೆ, ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆಯನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ಅವರು ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಈಗ ಯತೀಂದ್ರ ಹೇಳಿಕೆ ಬಗ್ಗೆ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆ. ಅವುಗಳಿಂದಲೇ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Cauvery water dispute : ಕಾವೇರಿ ಧ್ವನಿ ಎತ್ತದ ಕನ್ನಡ ನಟರ ವಿರುದ್ಧ ಬೆಂಗಳೂರಲ್ಲಿ ಪ್ರತಿಭಟನೆ
ಈ ಸರ್ಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್‌ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೂಪನ್‌ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದ್ದಾರೆ.
ಇದಕ್ಕೆಲ್ಲ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ನಮ್ಮ ಚನ್ನಪಟ್ಟಣದಲ್ಲಿ ನಮ್ಮ ಜನ ಇಂಥ ಆಮಿಷಗಳಿಗೆ ಮರುಳು ಆಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್‌ಗಳನ್ನು ಹಂಚಿಕೆ ಮಾಡಲಾಯಿತು. ಚುನಾವಣಾ ಆಯೋಗ ಸರಿಯಾಗಿ ತನಿಖೆ ಮಾಡಿದರೆ, ಸತ್ಯ ಹೊರಬರುತ್ತದೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆಯಾಗಲಿ
ಈವರೆಗೂ ರಾಜ್ಯದಲ್ಲಿ ಇಂಥ ಅಕ್ರಮ ಸರ್ಕಾರ ಬಂದಿಲ್ಲ. ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಿದರೆ ಈ ಸರ್ಕಾರವನ್ನು ವಜಾ ಮಾಡಬೇಕು ಎಂದ ಅವರು, ಕೇಂದ್ರ ಸರ್ಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದರು.
ಮುಂದಿನ ಲೋಕಸಭೆಗೆ ಸ್ಪರ್ಧೆ ಮಾಡಲಾರೆ
ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಸ್ಪರ್ಧಿಸುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ನಾನು ವಿಧಾನಸಭೆಯಲ್ಲಿ ಚನ್ನಪಟ್ಟಣದಿಂದ ಗೆದ್ದಿದ್ದೇನೆ. ಚನ್ನಪಟ್ಟಣದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಆಲೋಚನೆಯೂ ಇಲ್ಲ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Caste Census Report : ಜಾತಿ ಗಣತಿ ವರದಿ ಸ್ವೀಕಾರಕ್ಕೆ ಡಿಸಿಎಂ ಡಿಕೆಶಿ ವಿರೋಧ; ಸಿಎಂಗೆ ಪತ್ರ
ಮೈತ್ರಿ ಚರ್ಚೆಗಾಗಿ ನಾಳೆ ದೆಹಲಿಗೆ
ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್‌ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೋಣ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಟ್ವೀಟ್ ಮಾಡಿ ಆಕ್ರೋಶ
ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇ ಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ..
ಸ್ವತಃ ರಾಜ್ಯದ ಘನತವೆತ್ತ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ.
ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಡೆದಿದ್ದಾರೆ. ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಶ್ರೀ ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ.
ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ.
ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ. ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಖಡಕ್ ತನಿಖೆ ನಡೆಸಿ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು.
ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರ್ಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಈ ಅಕ್ರಮ ಸರ್ಕಾರವನ್ನು ವಜಾ ಮಾಡಬೇಕು. ಕಾಂಗ್ರೆಸ್ ಪಕ್ಷವು ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ. ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿ ಶೀಘ್ರವೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಷಡ್ಯಂತ್ರ, ಕುತಂತ್ರ, ಕುಯುಕ್ತಿಗಳನ್ನು ಪ್ರಯೋಗ ಮಾಡಲು ಹೊರಟಿದೆ.
ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿಷಪ್ರಾಶನ ಮಾಡುವ ಈ ದೇಶದ್ರೋಹಿ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ.( #SaveDemocracy #SaveIndia) ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಬರೆದಿದ್ದಾರೆ.
ದೂರು ಕೊಡಲು ಬಿಜೆಪಿ ನಿರ್ಧಾರ
ಚುನಾವಣೆಯಲ್ಲಿ ಕುಕ್ಕರ್ ಹಂಚಿಕೆ ಮಾಡಿ ಗೆಲುವು ಸಾಧಿಸಿದ್ದೇವೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಚುನಾವಣಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆಂದು ದೂರು ಕೊಡಲು ಬಿಜೆಪಿ ನಿರ್ಧಾರ ಮಾಡಿದೆ. ಇದನ್ನೇ ರಾಜಕೀಯ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಸಿದ್ದರಾಮಯ್ಯ ಶಾಸಕ ಸ್ಥಾನವನ್ನು ಅನರ್ಹ ಮಾಡುವಂತೆ ಕೋರಿ ಬಿಜೆಪಿ ದೂರು ಕೊಡಲು ಮುಂದಾಗಿದೆ.
ಕ್ರಮ ಕೈಗೊಳ್ಳಲು ಬೊಮ್ಮಾಯಿ ಒತ್ತಾಯ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯತೀಂದ್ರ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆಯನ್ನು ಹಂಚಿಕೆ ಮಾಡಿದ್ದರಿಂದಲೇ ತನ್ನ ತಂದೆ ಗೆಲ್ಲಲು ಕಾರಣವಾಯಿತು ಎಂದು ಯತೀಂದ್ರ ಹೇಳಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ತಕರಾರು ಅರ್ಜಿ ಇದೆ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಕ್ರಿಯೆ ನೀಡದ ಪ್ರತಿಸ್ಪರ್ಧಿ ಸೋಮಣ್ಣ
ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ವರುಣಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ. ಸೋಮಣ್ಣ ಆಗಮಿಸಿದ್ದರು. ಬಳಿಕ ಕೆಲ ಕಾಲ ಬೊಮ್ಮಾಯಿ ಜತೆ ಚರ್ಚೆ ಮಾಡಿದ್ದಾರೆ. ಆದರೆ, ಈ ಬಗ್ಗೆ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ಓದಿ: Cauvery water dispute : ಕಾವೇರಿ ಪರ ಧ್ವನಿ ಎತ್ತಿದ ಸ್ಟಾರ್ ನಟರು; ದರ್ಶನ್, ಸುದೀಪ್ ಹೇಳಿದ್ದೇನು?
ಕೆ.ಎಸ್. ಈಶ್ವರಪ್ಪ ಆಕ್ರೋಶ
ಮತಕ್ಕಾಗಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿದ್ದೇವೆ ಎಂಬ ಯತೀಂದ್ರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು, ಆಮಿಷ ತೋರಿಸಿ ಗೆದ್ದಿದ್ದಾರೆ. ಚುನಾವಣಾ ಆಯೋಗ ತಕ್ಷಣ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.