ಬೆಂಗಳೂರು: ಹಿರಿಯ ನಾಗರಿಕರಿಗೆ (Senior Citizens) ರಾಜ್ಯ ಸರ್ಕಾರ (State Government of Karnataka) ಸಿಹಿ ಸುದ್ದಿಯೊಂದನ್ನು ನೀಡುತ್ತಿದೆ. ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು (monthly pension) ಮುಂದಿನ ಬಜೆಟ್‌ನಲ್ಲಿ (Next Budget) ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಷ್ಟು ಹೆಚ್ಚಳ ಮಾಡಲಾಗುವುದು ಎಂದು ಈಗಲೇ ಹೇಳುವುದಿಲ್ಲ. ಈಗ ಇರುವುದಕ್ಕಿಂತ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: BJP Karnataka : ಒಂದು ಸಮುದಾಯವನ್ನು ಮಾತ್ರವೇ ಓಲೈಸುವ ಸಿಎಂ ಸಿದ್ದರಾಮಯ್ಯ; ಬಿಜೆಪಿ ಸರಣಿ ಟ್ವೀಟ್
ಇದಕ್ಕೂ ಮೊದಲು ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar), ಹಿರಿಯ ನಾಗರಿಕರಿಗೆ ನೀಡುವ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು ಎಂದು ಸಿಎಂ ಬಳಿ ಮನವಿ ಮಾಡಿದರು.
ಲಕ್ಷ್ಮಿ ಹೆಬ್ಬಾಳ್ಕರ್ ಮನವಿ
5 ಗ್ಯಾರಂಟಿ ಯೋಜನೆ (Congress Guarantee Scheme) ಕೊಟ್ಟಿದ್ದೀರಾ ಹಾಗೇ ನಮ್ಗೆ ಪೆನ್ಷನ್ ಜಾಸ್ತಿ ಮಾಡಿ ಎಂದು ಸಾಕಷ್ಟು ಹಿರಿಯ ನಾಗರಿಕರು ಪಿಂಚಣಿ ಹೆಚ್ಚಳಕ್ಕೆ ನನ್ನ ಬಳಿ ಮನವಿ ಮಾಡುತ್ತಿದ್ದಾರೆ. ನಿಮ್ಮ ಅಹವಾಲನ್ನು ಸಿಎಂ ಗಮನಕ್ಕೆ ತರುತ್ತೇನೆ ಎಂದು ಅವರಿಗೆಲ್ಲ ಹೇಳಿದ್ದೆ. ಈಗ ಈ ಕಾರ್ಯಕ್ರಮದ ಮೂಲಕ ನಿಮ್ಮ ಗಮನಕ್ಕೆ ತರಬಯಸುತ್ತಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ, ತಾವು ಭಾಷಣ ಮಾಡುವಾಗ ಹಿರಿಯ ನಾಗರಿಕರ ಪಿಂಚಣಿಯನ್ನು ಹೆಚ್ಚಳ ಮಾಡುವ ಭರವಸೆ ನೀಡಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡುತ್ತೇವೆ. ಆದರೆ, ಎಷ್ಟು ಎಂಬುದನ್ನು ಈಗಲೇ ಹೇಳಲಾಗದು ಎಂದು ಹೇಳಿದರು.
ಸಾರ್ಥಕ ಬದುಕು ನಡೆಸುವುದು ಉತ್ತಮ
ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವವಾಗಿದೆ. ನಾವು – ನೀವೆಲ್ಲ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Lingayat CM : ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ
ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್. ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್. ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.