Site icon Vistara News

Assembly Elections 2023 : ನಮ್ಮ ಗ್ಯಾರಂಟಿ ಯಶಸ್ಸಿನಿಂದ ತೆಲಂಗಾಣದಲ್ಲಿ ಗೆಲುವು: ಸಿಎಂ ಸಿದ್ದರಾಮಯ್ಯ

CM Siddaramaiah

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇರುತ್ತದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಇನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ (Assembly Elections 2023) ಕಾಂಗ್ರೆಸ್‌ ಗೆಲುವಿಗೆ ಕರ್ನಾಟಕದ ಗ್ಯಾರಂಟಿ ಯೋಜನೆಯ (Congress Guarantee Scheme) ಕೊಡುಗೆ ಬಹಳ ದೊಡ್ಡದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್‌ಗಢಗಳಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ಹೇಳಿದರು. ‌

ಇದನ್ನೂ ಓದಿ: Assembly Session: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ; ಪಿಡಬ್ಲ್ಯುಡಿ ಎಂಜಿನಿಯರ್‌ಗೆ ಸ್ಪೀಕರ್ ಕ್ಲಾಸ್

ನಮ್ಮ ಗ್ಯಾರಂಟಿಯಿಂದ ಜನ ಭರವಸೆ ಇಟ್ಟರು

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಬಿಆರ್‌ಎಸ್ ಪಕ್ಷದ ಜತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡೂ ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌, ಕೂಡಾ ನಮ್ಮ ಗೆಲುವಿಗೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಆಟ

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮ ಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಜನರು ಪಕ್ಷವನ್ನು‌ ಬದಲಾಯಿಸುವ ಪರಿಪಾಠವನ್ನು ನಡೆಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಅದೇ ಪದ್ಧತಿಯನ್ನು ಮುಂದುವರಿಸಿದ್ದಾರೆ. ಈ ಕಾರಣದಿಂದಾಗಿ ಅಶೋಕ್ ಗೆಹ್ಲೋಟ್‌ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

ಆಡಳಿತ ವಿರೋಧಿ ಅಲೆ ಸೋಲಿಗೆ ಕಾರಣ

ರಾಜಸ್ಥಾನ ಮತ್ತು ಚತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ಥಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Exit mobile version