Site icon Vistara News

HD Kumaraswamy : ಕತ್ತಲೆ ಭಾಗ್ಯ 6ನೇ ಗ್ಯಾರಂಟಿ; ನವರಾತ್ರಿಗೆ ಮೊದಲೇ ಕರಾಳ ರಾತ್ರಿ ಎಂದ HDK

power cut HDKumaraswamy

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಲೋಡ್‌ ಶೆಡ್ಡಿಂಗ್‌ (power Load Shedding), ರೈತರ ಪಂಪ್‌ ಸೆಟ್‌ಗಳಿಗೆ (Farmers Pumpset) ಸಿಗದ ವಿದ್ಯುತ್‌ ಮೊದಲಾದ ವಿಚಾರಗಳನ್ನು ಇಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನು ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಆರನೇ ಗ್ಯಾರಂಟಿ (Sixth Congress Guarantee) ಎಂದು ವ್ಯಾಖ್ಯಾನಿಸಿದ್ದಾರೆ. ಉಳಿದ ಐದು ಗ್ಯಾರಂಟಿಗಳು ಅರೆಬರೆಯಾಗಿ ಪೂರ್ಣವಾಗಿದ್ದರೆ ಆರನೇ ಭಾಗ್ಯವಂತೂ ಪರಿಪೂರ್ಣವಾಗಿ ಎಲ್ಲರನ್ನೂ ತಲುಪಿದೆ ಎಂದು ಗೇಲಿ ಮಾಡಿದ್ದಾರೆ.

2024ರ ಜನವರಿಗೆ ಕಗ್ಗತ್ತಲ ಕರ್ನಾಟಕ ಉದಯ!

ರಾಜ್ಯದ ಕಾಂಗ್ರೆಸ್‌ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!!- ಎಂದು ಎಚ್‌.ಡಿ ಕುಮಾರಸ್ವಾಮಿ ಸರಣಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎನ್ನುವುದು ಎಚ್.ಡಿ ಕುಮಾರಸ್ವಾಮಿ ಮಾತು.

ನಮ್ಮ ರೈತರಿಗೆ ಲೋಡ್‌ ಶೆಡ್ಡಿಂಗ್‌, ತಮಿಳುನಾಡಿಗೆ ಸಮೃದ್ಧ ನೀರು!

ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು!!

ಎಚ್‌.ಡಿ ಕುಮಾರಸ್ವಾಮಿ ಅವರು ಕೆಆರ್‌ಎಸ್‌ಗೆ ಭೇಟಿ ನೀಡಿದ ಸಂದರ್ಭ

ನಾಲೆಗಳಲ್ಲಿ ನೀರಿಲ್ಲ, ಪಂಪ್‌ ಮಾಡಲು ಕರೆಂಟಿಲ್ಲ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಕಾಂಗ್ರೆಸ್‌ ಸರಕಾರ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ.

ವಿದ್ಯುತ್‌ ಸಾಲದ ಸುಳಿಯಲ್ಲಿ ಕರ್ನಾಟಕ

ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ?

ನವರಾತ್ರಿಗೆ ಮೊದಲೇ ಕಗ್ಗತ್ತಲ ರಾತ್ರಿ ಭಾಗ್ಯ

ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆ ಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ!!

ವಿದ್ಯುತ್‌ ದುಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ

ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ.

ಇದನ್ನೂ ಓದಿ: CM Siddaramaiah: ವಿದ್ಯುತ್‌, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಖಾಸಗಿ ವಿದ್ಯುತ್‌ ಕಂಪನಿಗಳಿಗೆ 11 ತಿಂಗಳಿನಿಂದ ಬಿಡಿಗಾಸು ಕೊಟ್ಟಿಲ್ಲ!

ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ.

Exit mobile version