Site icon Vistara News

National pension scheme: ಒಪಿಎಸ್‌ ಜಾರಿ; ಅರೆಬರೆ, ತರಾತುರಿ ಆದೇಶವೆಂದ ಎಚ್‌.ಡಿ. ಕುಮಾರಸ್ವಾಮಿ

HD Kumaraswamy and CM Siddaramaiah

ಬೆಂಗಳೂರು: 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (National pension scheme-NPS) ವ್ಯಾಪ್ತಿಯಿಂದ ಹಳೆಯ ಪಿಂಚಣಿ ಯೋಜನೆಗೆ (Old Pension Scheme-OPS) ಬದಲಾಗಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ, ಇದು ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರ್ಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರ್ಕಾರ ಹಳೇ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರ್ಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದು ಕಿಡಿಕಾರಿದ್ದಾರೆ.

ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರ್ಕಾರದ ಘನಂದಾರಿ ಸಾಧನೆ ಏನೂ ಇಲ್ಲ. ಮೇ ತಿಂಗಳಲ್ಲಿಯೇ OPS ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರ್ಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕುಳಿತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರ್ಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು! ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಕುಟುಕಿದ್ದಾರೆ.

ಎರಡು ನಾಲಿಗೆಯ ಕಾಂಗ್ರೆಸ್‌ನವರು

ಎರಡು ನಾಲಿಗೆಯ ಕಾಂಗ್ರೆಸ್‌ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರ್ಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ ‌OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರ್ಕಾರಕ್ಕೆ ಮಾಹಿತಿ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Jagadish Shetter: ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್‌ಗೆ ನೀಡಿದ ಆ 3 ಆಫರ್‌ ಏನು?

ಹೇಳುವುದು ಒಂದು, ಮಾಡುವುದು ಇನ್ನೊಂದು

ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರ್ಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version