ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ (President Election 2022) ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜೆಡಿಎಸ್ ತೀರ್ಮಾನಿಸಿದೆ. ಶುಕ್ರವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಆನ್‌ಲೈನ್‌ಮೂಲಕ ಈ ಸಭೆಯಲ್ಲಿ ಭಾಗವಹಿಸಿದ್ದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ ಎಂ ಇಬ್ರಾಹಿಂ ಕೂಡ ಪುತ್ರಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರಿಂದ ಆನ್‌ಲೈನ್‌ನಲ್ಲಿಯೇ ಭಾಗವಹಿಸಿ, ಈ ತೀರ್ಮಾನಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಸಭೆಯ ಕುರಿತು ಮಾಹಿತಿ ನೀಡಿರುವ ಬಂಡೆಪ್ಪ ಕಾಶೆಂಪುರ, ʼಪಕ್ಷದ ವರಿಷ್ಠ ಎಚ್ ಡಿ ದೇವೇಗೌಡರು ಪ್ರಧಾನಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದರು. ಹೀಗಾಗಿ ಈಗ ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶ ಬಂದಿದೆ. ಆದ್ದರಿಂದ ದ್ರೌಪದಿ ಮುರ್ಮ ಅವರನ್ನು ಬೆಂಬಲಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.
ಕಳೆದ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದ ದ್ರೌಪದಿ ಮುರ್ಮು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತರಿದ್ದರು.
ಇದನ್ನೂ ಓದಿ | ರಾಷ್ಟ್ರಪತಿ ಚುನಾವಣೆ: ದೇವೇಗೌಡರ ಭೇಟಿಯಾದ ದ್ರೌಪದಿ ಮುರ್ಮು, ಜೆಡಿಎಸ್ ಬೆಂಬಲ ಸಾಧ್ಯತೆ